ವ್ಯಸನ ವಿಮುಕ್ತ ಕೇಂದ್ರಗಳ ನೋಂದಣಿ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿ.ಲಕ್ಷ್ಮೀಕಾಂತರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆ ಆಯೋಜಿಸಲಾಗಿತ್ತು. ಮಲ್ಲಿಕಾರ್ಜುನ ಬಾಲದಂಡಿ, ಮಲ್ಲಿಕ್, ಡಾ.ಪಿ.ಸಿ ಕುಮಾರಸ್ವಾಮಿ ಇದ್ದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿ.ಲಕ್ಷ್ಮೀಕಾಂತರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆ ಆಯೋಜಿಸಲಾಗಿತ್ತು. ಮಲ್ಲಿಕಾರ್ಜುನ ಬಾಲದಂಡಿ, ಮಲ್ಲಿಕ್, ಡಾ.ಪಿ.ಸಿ ಕುಮಾರಸ್ವಾಮಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನೋಂದಣಿಯಾಗದೆ ನಡೆಸುತ್ತಿರುವ ವ್ಯಸನ ವಿಮುಕ್ತಿ ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು
  • ಪ್ರತಿಯೊಂದು ವ್ಯಸನ ವಿಮುಕ್ತಿ ಕೇಂದ್ರವು ಕೆಪಿಎಂಎ ಅಡಿಯಲ್ಲಿ ನೋಂದಣಿಯಾಗಿರುವುದು ಕಡ್ಡಾಯ
ಮೈಸೂರು:ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ವ್ಯಸನ ವಿಮುಕ್ತ ಕೇಂದ್ರಗಳು (ಡಿ-ಅಡಿಕ್ಷನ್ ಸೆಂಟರ್) ಕಡ್ಡಾಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಯಡಿ(ಕೆಪಿಎಂಎ) ನೋಂದಣಿಯಾಗಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀ ಕಾಂತರೆಡ್ಡಿ ಎಚ್ಚರಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ಜಿಲ್ಲಾದ್ಯಂತ ಪರಿಶೀಲನೆ ನಡೆಸಿ ನೋಂದಣಿಯಾಗದೆ ನಡೆಸುತ್ತಿರುವ ವ್ಯಸನ ವಿಮುಕ್ತಿ ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲಿಯ ವ್ಯವಸ್ಥೆ, ವ್ಯಸನ ಮುಕ್ತರನ್ನು ನಡೆಸಿಕೊಳ್ಳುವ ರೀತಿ ಎಲ್ಲವನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರತಿಯೊಂದು ವ್ಯಸನ ವಿಮುಕ್ತಿ ಕೇಂದ್ರವು ಕೆಪಿಎಂಎ ಅಡಿಯಲ್ಲಿ ನೋಂದಣಿಯಾಗಿರುವುದು ಕಡ್ಡಾಯ. ಈ ನಿಯಮ ಉಲ್ಲಂಘಿಸಿ ನೋಂದಣಿ ಮಾಡಿಕೊಳ್ಳದೆ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳನ್ನು ತಕ್ಷಣವೇ ಗುರುತಿಸಿ, ಅಂತಹ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಬೇಕು ಎಂದು ತಿಳಿಸಿದರು.
ವೈದ್ಯರ ಚೀಟಿ ಇಲ್ಲದೆ ಔಷಧ ಮಾರಾಟ ಮಾಡುವ ಮೆಡಿಕಲ್ ಶಾಪ್‌ಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು. ಮಾದಕ ವ್ಯಸನಗಳಿಗೆ ಕಾರಣವಾಗುವಂತಹ ಔಷಧಗಳ ಅನಧಿಕೃತ ಮಾರಾಟ ತಡೆಯಲು ಆರೋಗ್ಯ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಎಚ್.ಡಿ.ಕೋಟೆ ತಾಲೂಕು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡು ಇರುವುದರಿಂದ ಗಾಂಜಾ ಬೆಳೆಯುವ ಸಾಧ್ಯತೆ ಹೆಚ್ಚು. ಈ ಭಾಗದಲ್ಲಿ ಹೆಚ್ಚಿನ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜೂ.26ರಂದು ಮಾದಕ ವಸ್ತುಗಳ ನಿರ್ಮೂಲನ ದಿನ ಆಚರಿಸಲಾಗುವುದು. ಈ ಮೂಲಕ ಜನರಲ್ಲಿ ವ್ಯವನದ ಕುರಿತು ಜಾಗೃತಿ ಮೂಡಿಸುವ ಕಾರ್ಯ ನಡೆಯಲಿದೆ ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್ ಮಾತನಾಡಿ, ಜಿಲ್ಲೆಯ ತಾಲೂಕು ಕಾರಗೃಹಗಳನ್ನು ಡ್ರಕ್ಸ್ ಮುಕ್ತವಾಗಿಸಲು ಅರಿವು ಕಾರ್ಯಕ್ರಮವನ್ನು ಮಾಡಿಸಲಾಗಿದೆ. ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಸೇವನೆ, ಅದರ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ ಕುಮಾರಸ್ವಾಮಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net