ನೀಟ್ ಅಕ್ರಮ, ಧರ್ಮೇಂದ್ರ ಪ್ರಧಾನ್ ವಿರುದ್ಧ ಮೈಸೂರಿನಲ್ಲಿ ವಿವಿಧ ಸಂಘಟನೆಗಳಿಂದ ಸರಣಿ ಪ್ರತಿಭಟನೆ

ನೀಟ್ ಪರೀಕ್ಷೆ ಅಕ್ರಮ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ
ನೀಟ್ ಪರೀಕ್ಷೆ ಅಕ್ರಮ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ
Published on

ಪ್ರಮುಖ ಮುಖ್ಯಾಂಶಗಳು

  • ನೀಟ್ ಪರೀಕ್ಷೆಯ ಅಕ್ರಮದಿಂದಾಗಿ ಆತ್ಮಹತ್ಯೆ ಮಾಡಿಕೊಂಡವರ ಸಾವಿಗೆ ಹೊಣೆ ಹೊತ್ತು ಕೇಂದ್ರ ಸಚಿವರ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು
  • ನ್ಯಾಯಯುತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ಅಮಾನವೀಯ
ಮೈಸೂರು: ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿ ಪ್ರಹಾರ ನಡೆಸಿರುವುದನ್ನು ವಿವಿಧ ಸಂಘಟನೆಗಳಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ಎಸ್‌ಎಫ್‌ಐನಿಂದ ಪ್ರತಿಭಟನೆಯಿಂದ ನಗರದ ಜಿಲ್ಲಾಧಿಕಾರಿ ಹಳೆ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಎಸ್‌ಎಫ್‌ಐ) ಮೈಸೂರು ಜಿಲ್ಲಾ ಸಂಘಟನೆ ಸಮಿತಿ ಸದಸ್ಯರು, ನೀಟ್ ಪರೀಕ್ಷೆಯ ಅಕ್ರಮದಿಂದಾಗಿ 21 ಜನ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ಸಾವಿಗೆ ಹೊಣೆಯಾರು? ಈ ಕೂಡಲೇ ಕೇಂದ್ರ ಸಚಿವರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ್ದರೂ ಈವರೆಗೆ ತಪ್ಪಿತಸ್ಥರಿಗೆ ಶಿಕ್ಷೆಯಾಗಿಲ್ಲ. ನೀಟ್ ಪರೀಕ್ಷೆಯ ಪಾವಿತ್ರ್ಯ ಮತ್ತು ವಿಶ್ವಾಸಾರ್ಹತೆ ಪ್ರಶ್ನಾರ್ಥಕವಾಗಿರುವುದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ದೇಶಾದ್ಯಂತ ಸುವಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ತಮ್ಮ ವೈದ್ಯಕೀಯ ಶಿಕ್ಷಣದ ಕನಸಿಗಾಗಿ ವರ್ಷಗಳ ಕಾಲ ಶ್ರಮಿಸಿದ್ದಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಗಳು ಮತ್ತು ಪರೀಕ್ಷಾ ನಿರ್ವಹಣೆಯಲ್ಲಿನ ಲೋಪಗಳಿಂದ ವಿದ್ಯಾರ್ಥಿಗಳಲ್ಲಿ ಆತಂಕ ಮತ್ತು ಅಸವಾಧಾನ ಉಂಟಾಗಿದೆ ಎಂದು ದೂರಿದರು.
ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಟಿ.ಎಸ್.ವಿಜಯಕುಮಾರ್, ಜಿಲ್ಲಾ ಮುಖಂಡರಾದ ಜೀವನ್, ಡಿ.ಅಭಿ, ರಾಘವೇಂದ್ರ ಇತರರು ಇದ್ದರು.
ಕನ್ನಡಾಂಬೆ ರಕ್ಷಣಾ ವೇದಿಕೆ:
ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು, ದೆಹಲಿಯಲ್ಲಿ ನೀಟ್ ಪರೀಕ್ಷೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ದಾಳಿ ಮತ್ತು ಹಲ್ಲೆಯನ್ನು ಖಂಡನೀಯ ಎಂದರು.
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದೆ. ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಮಾನವೀಯವಾಗಿ ಲಾಠಿ ಪ್ರಹಾರ ನಡೆಸಿರುವುದು ಅತ್ಯಂತ ಖಂಡನೀಯ ಎಂದರು.
ಕನ್ನಡಾಂಬೆ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ರಾಜಶೇಖರ್, ರಾಜ್ಯ ಖಜಾಂಚಿ ನಂಜುಂಡ, ಮಹಿಳಾ ಘಟಕದ ಅಧ್ಯಕ್ಷ ವತ್ಸಲಾ, ರಶ್ಮಿ ಸಿಂಗ್, ಶಶಿಕಲಾ, ರಾಧಾ, ಗಂಗಾಧರ್, ಕಾವ್ಯ, ಪವನ್, ನಿತಿನ್, ನಾಗರಾಜ್, ಸಿಂಧುವಳ್ಳಿ ಶಿವಕುಮಾರ್, ಮಹೇಂದ್ರ, ಮೈಸೂರು ಹೃದಯವಂತ ಕನ್ನಡಿಗರ ಬಳಗದ ಅಧ್ಯಕ್ಷ ಡಿಪಿಕೆ ಪರಮೇಶ್, ನಗರ ಅಧ್ಯಕ್ಷ ಹೊನ್ನೇಗೌಡ, ಪರಿಸರವಾದಿಗಳಾದ ಭಾನು ಮೋಹನ್, ಹರೀಶ, ನಾಗರಾಜ್, ಮೋಹನ್, ವಿಷ್ಣು ಇತರರಿದ್ದರು.
ಕಾಂಗ್ರೆಸ್ ಸಮಿತಿ:
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಪುರಭವನ ಆವರಣದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಜಮಾವಣೆಗೊಂಡ ಪ್ರತಿಭಟನಾಕಾರರು,ನೀಟ್ ಪರೀಕ್ಷೆ ಬರೆದ 20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಪರಿಸ್ಥಿತಿ ಡೋಲಾಯಮಾನವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾಗಲು ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಹೊಸದಿಲ್ಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಪ್ರಹಾರ ನಡೆಸಿರುವುದು ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ನಗರ ವಕ್ತಾರ ಎಸ್.ರಾಜೇಶ್, ಮುಖಂಡರಾದ ಸೈಯದ್‌ಫಾರೂಖ್, ಎಸ್.ಎ.ರಹೀಂ, ಆರ್.ಕೆ. ರವಿ, ಪುಟ್ಟರಾಜು, ರಾಮು, ಮಂಜು, ಸುನಿಲ್ ನಾರಾಯಣ, ರಂಗಸ್ವಾಮಿ, ಕೆ.ರಾಮು, ಬಾಬು, ರವಿನಾಯಕ, ಮೋಹನ್ ಕುಮಾರ್, ಬಿ.ಜಿ.ಕೇಶವ ಇನ್ನಿತರರು ಇದ್ದರು.
ಎಐಡಿಎಸ್‌ಒನಿಂದ ಪ್ರತಿಭಟನೆ:
ಸಂಸತ್ ಚಲೋಗೆ ತೆರಳುತ್ತಿದ್ದ ಪ್ರತಿಭಟನಾಕಾರರ ಮೇಲೆ ಹೊಸದಿಲ್ಲಿಯ ಜಂತರ್ ಮಂಥರ್‌ನಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್‌ನಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ರಾಮಸ್ವಾಮಿ ವೃತ್ತದ ಬಳಿ ಪ್ರತಿಭಟನೆ ನಡೆಸಿ, ಪ್ರತಿಭಟನಾಕಾರರ ಮೇಲಿನ ಲಾಠಿ ಪ್ರಹಾರ ಮತ್ತು ಅಶ್ರುವಾಯು ದಾಳಿ ಖಂಡನೀಯ. ಮೆರವಣಿಗೆಯನ್ನು ಬಹಳ ಹಿಂದೆಯೇ ಘೋಷಿಸಲಾಗಿದ್ದರೂ ಪೊಲೀಸರು ಅನುಮತಿ ನಿರಾಕರಿಸಿರುವುದು ಖಂಡನೀಯ ಎಂದರು.
ಕಾನೂನು ಜನಸಾಮಾನ್ಯರ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವುದನ್ನು ನಿಲ್ಲಿಸಿದ ಕ್ಷಣದಿಂದಲೇ ಅದು ಅನ್ಯಾಯ ಸಾಧನವಾಗುತ್ತದೆ. ಅಂತಹ ಕಾನೂನನ್ನು ಕಿತ್ತೆಸೆಯುವುದು ವಿದ್ಯಾರ್ಥಿಗಳ ಸಂಸ್ಕೃತಿ. ಅನ್ಯಾಯವೇ ಆಳ್ವಿಕೆಯಾದಾಗ ಪ್ರತಿಭಟನೆ ಅನಿವಾರ್ಯವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಐಡಿಎಸ್‌ಒ ಜಿಲ್ಲಾಧ್ಯಕ್ಷೆ ಚಂದ್ರಕಲಾ, ಎಐಎಂಎಸ್‌ಎಸ್ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಸೀಮಾ, ಎಐಡಿವೈಒ ಜಿಲ್ಲಾಧ್ಯಕ್ಷ ಸುನೀಲ್, ಜಿಲ್ಲಾ ಕಾರ್ಯದರ್ಶಿ ನಿತಿನ್, ಪದಾಧಿಕಾರಿಗಳಾದ ಸುಮಾ, ಪುಷ್ಪಾ, ಸ್ವಾತಿ, ಚಂದ್ರಿಕಾ, ಹೇಮಾ, ದಿಶಾ, ಅಂಜಲಿ, ಅಭಿಷೇಕ್, ನಂದೀಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net