

ಯುವಜನರಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವುದೇ ಯುವಜನೋತ್ಸವದ ಪ್ರಮುಖ ಉದ್ದೇಶವಾಗಿದೆ ಎಂದು ಮೈಸೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಸಂಯೋಜಕ ಡಾ. ಎಂ.ಬಿ.ಸುರೇಶ್ ಹೇಳಿದರು.
ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ, ಮಹಾರಾಣಿ ವಿಜ್ಞಾನ ಕಾಲೇಜು ವತಿಯಿಂದ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 2026-27ನೇ ಸಾಲಿನ ಮೈಸೂರು ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿ ವರ್ಷದಂತೆ ಈ ಬಾರಿಯೂ ನವೆಂಬರ್ ತಿಂಗಳಿನಲ್ಲಿ ಯುವಜನೋತ್ಸವ ಆಯೋಜಿಸಲಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಅಚ್ಚುಕಟ್ಟಾಗಿ ಕಾರ್ಯಕ್ರಮ ರೂಪಿಸಲಾಗಿದ್ದು, ಯಾವುದೇ ತಾರತಮ್ಯವಿಲ್ಲದೆ ನಿಷ್ಪಕ್ಷಪಾತವಾಗಿ ಸ್ಪರ್ಧೆಗಳು ನಡೆಯಲಿವೆ ಎಂದರು.
ಯುವಜನರ ಪ್ರತಿಭೆ ಅನಾವರಣಗೊಳಿಸಲು ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ. ಕೇವಲ ಒಂದು ದಿನದ ಸ್ಪರ್ಧೆಗೆ ಯುವಜನೋತ್ಸವ ಸೀಮಿತವಾಗಿಲ್ಲ. ವರ್ಷವಿಡೀ ಯುವಜನರ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸುವಂತಹ ಕಾರ್ಯಕ್ರಮಗಳು ನಡೆಯುತ್ತವೆ. ಇಲ್ಲಿ ಭಾಗವಹಿಸುವ ಸ್ಪರ್ಧಿಗಳು ಪ್ರಾಮಾಣಿಕವಾಗಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ವಿಜೇತರನ್ನು ಗುರುತಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಿಗೆ ಕಳುಹಿಸಲಾಗುವುದು. ಎಲ್ಲ ಸ್ಪರ್ಧಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಗ್ಲೋಬಲ್ ಫೌಂಡೇಷನ್ನ ಇಂಬ್ರಾನ್ ಮಾತನಾಡಿ, ದೇಶದ ಯುವಶಕ್ತಿಯನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಕಾರ್ಯಕ್ರಮಗಳಿಗೆ ಉತ್ತೇಜನ ನೀಡುತ್ತಿದ್ದಾರೆ. ಯುವಜನೋತ್ಸವವೆಂದರೆ ಕೇವಲ ಸ್ಪರ್ಧೆ ನಡೆಸಿ ಬಹುಮಾನ ಪಡೆಯುವ ಕಾರ್ಯಕ್ರಮವಲ್ಲ. ಬದಲಿಗೆ ಯುವಜನರ ವ್ಯಕ್ತಿತ್ವ ರೂಪಿಸುವ, ಅವರಲ್ಲಿರುವ ಜಾಣ್ಮೆ, ಕೌಶಲ ಹಾಗೂ ಸಕಲ ಕಲಾ ಪ್ರತಿಭೆಗಳನ್ನು ಹೊರತರುವ ವೇದಿಕೆಯಾಗಿದೆ. ರಾಷ್ಟ್ರಮಟ್ಟದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಇಂತಹ ಕಾರ್ಯಕ್ರಮಗಳು ಅವಕಾಶ ಕಲ್ಪಿಸುತ್ತವೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಮಾತನಾಡಿ, ಜಿಲ್ಲಾಮಟ್ಟದಲ್ಲಿ ಉತ್ತಮ ಸಾಧನೆ ತೋರುವ ಪ್ರತಿಭಾವಂತ ಯುವಕರನ್ನು ರಾಜ್ಯಮಟ್ಟಕ್ಕೆ ಕಳುಹಿಸಲಾಗುವುದು. ಎಲ್ಲ ವಿಭಾಗಗಳಲ್ಲೂ ಸ್ಪರ್ಧಿಗಳು ಪ್ರಥಮ ಸ್ಥಾನ ಗಳಿಸುವ ಗುರಿಯೊಂದಿಗೆ ಶ್ರಮಿಸಬೇಕು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮೈಸೂರಿನ ಕೀರ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಯುವಜನ ಅಧಿಕಾರಿ ಪಿ.ಅಖಿಲ್, ಮಹಾರಾಣಿ ಕಾಲೇಜಿನ ಪ್ರಾಂಶುಪಾಲರಾದ ಎನ್.ಕೆ.ಲೀಲಾವತಿ, ಆಕಾಶವಾಣಿಯ ಉಮೇಶ್, ನಂಜುಂಡಸ್ವಾಮಿ, ಸುಂದ್ರೇಶ್ ಸೇರಿ ಇತರರಿದ್ದರು.