ವಿಷ್ಣು ತನ್ನ ಅವತಾರ ಸಮಾಪ್ತಿಗೊಳಿಸಿ ವೈಕುಂಠಕ್ಕೆ ತೆರಳುವ ದಿನವನ್ನು ವೈಕುಂಠ ಏಕಾದಶಿಯಾಗಿ ಆಚರಿಸಲಾಗುತ್ತದೆ. ವೈಕುಂಠ ಏಕಾದಶಿಯಂದು ನಾರಾಯಣನ ದರ್ಶನ ಪಡೆದು ವೈಕುಂಠ ದ್ವಾರದ ಮೂಲಕ ಹೊರಬಂದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ನಗರದ ಒಂಟಿಕೊಪ್ಪಲಿನ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯ, ಜಯನಗರದ ಇಸ್ಕಾನ್ ದೇವಾಲಯ, ಊಟಿ ರಸ್ತೆಯ ಗಣಪತಿ ಸಚ್ಚಿದಾನಂದ ಆಶ್ರಮ, ವಿಜಯನಗರದ ಯೋಗ ನರಸಿಂಹ ಸ್ವಾಮಿ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಹೂಗಳಿಂದ ಸ್ವರ್ಗದ ಬಾಗಿಲು ನಿರ್ಮಿಸಲಾಗಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿದ ಭಕ್ತರು ಸ್ವರ್ಗದ ಬಾಗಿಲ ಮೂಲಕ ದೇವರ ದರ್ಶನ ಪಡೆದರು.