

ಮೆಟ್ರೊ ಯೋಜನೆ ಅನುಷ್ಠಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡರ ಕೊಡುಗೆಯೂ ಇದೆ. ಎರಡೂ ಸರ್ಕಾರಗಳ ಸಹಯೋಗದಿಂದ ಮೆಟ್ರೊ ಅಭಿವೃದ್ಧಿಯಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗಿದೆ. ಹೀಗಾಗಿ ಯೋಜನೆಯ ವಿಚಾರದಲ್ಲಿ ಕ್ರೆಡಿಟ್ ವಾರ್ ಬೇಡ. ಯಾರಿಗೆ ಶ್ರೇಯಸ್ಸು ನೀಡಬೇಕೆಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬೆಂಗಳೂರಿನಲ್ಲಿ ಪಿಂಕ್ ಲೈನ್ ಮೆಟ್ರೊ ಯೋಜನೆ ಉದ್ಘಾಟನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಮೆಟ್ರೊ ಯೋಜನೆಯನ್ನು ರಾಜಕೀಯ ಪ್ರತಿಷ್ಠೆಯನ್ನಾಗಿಸದೆ, ಅಚ್ಚುಕಟ್ಟಾಗಿ ಉದ್ಘಾಟಿಸಿ ಸಾರ್ವಜನಿಕರಿಗೆ ಸಮರ್ಪಿಸುವುದು ಮುಖ್ಯ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಚಿವ ಕೃಷ್ಣ ಬೈರೇಗೌಡ ಅವರ ಭಾಷಣ ಮೊಟಕುಗೊಳಿಸಿದ ವಿಚಾರವಾಗಿ ಪ್ರತಿಕ್ರಿಯಿಸಿ, ಕಾರ್ಯಕ್ರಮದ ಸಮಯವನ್ನು ಮೊದಲೇ ನಿಗದಿಪಡಿಸಲಾಗಿರುತ್ತದೆ. ಪ್ರಧಾನಿ ಕಾರ್ಯಕ್ರಮವಾಗಿರುವುದರಿಂದ ಪ್ರೋಟೋಕಾಲ್ ಪ್ರಕಾರ ಎಲ್ಲವೂ ನಡೆಯುತ್ತದೆ. ಉದ್ದೇಶಪೂರ್ವಕವಾಗಿ ಭಾಷಣ ಮೊಟಕುಗೊಳಿಸಲಾಗಿದೆ ಎಂಬುದು ಸರಿಯಲ್ಲ. ಮೈಸೂರಿನ ಕಾರ್ಯಕ್ರಮದಲ್ಲಿ ನನ್ನ ಭಾಷಣ ಕೂಡ ಮೊಟಕುಗೊಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರು ಮೊದಲ ಸ್ಥಾನ ಗಳಿಸಿರುವುದಕ್ಕೆ ಪೌರಕಾರ್ಮಿಕರ ಪರಿಶ್ರಮವೇ ಪ್ರಮುಖ ಕಾರಣ. ಅವರ ಕೊಡುಗೆ ಶೇ.100 ಪ್ರತಿದಿನ ಬೆಳಗ್ಗೆಯಿಂದಲೇ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಪೌರಕಾರ್ಮಿಕರ ಜತೆಗೆ ಮಹಾನಗರ ಪಾಲಿಕೆಯೂ ಮಹತ್ವದ ಪಾತ್ರ ವಹಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರು ಸ್ಥಾನ ಪಡೆಯದಿರುವ ಬಗ್ಗೆ ಮಾತನಾಡಿ, ರಾಷ್ಟ್ರೀಯ ಮಟ್ಟದ ಸ್ವಚ್ಛತಾ ಶ್ರೇಯಾಂಕಕ್ಕೆ ಹಲವು ಮಾನದಂಡಗಳಿವೆ. ನಗರದಲ್ಲಿರುವ ಕೆಲವು ಲೋಪಗಳನ್ನು ಸರಿಪಡಿಸಿಕೊಳ್ಳಬೇಕಿದೆ. ರಿಂಗ್ ರಸ್ತೆ ಹಾಗೂ ಎಕ್ಸೆಲ್ ಪ್ಲಾಂಟ್ನಲ್ಲಿ ಕಸ ವಿಲೇವಾರಿಗೆ ಸಂಬಂಧಿಸಿದ ಸಮಸ್ಯೆಗಳಿದ್ದು, ಅವುಗಳನ್ನು ಬಗೆಹರಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.
ನಗರದ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಜನರು ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ನಿಲ್ಲಿಸಬೇಕು. ಪ್ರವಾಸಿಗರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಾರ್ವಜನಿಕರ ಸಹಕಾರ ದೊರೆತಾಗ ಮಾತ್ರ ಮೈಸೂರು ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆಯಲು ಸಾಧ್ಯ ಎಂದರು.
ಗುಪ್ತಚರ ವೈಫಲ್ಯದ ಅನುಮಾನ:
ನಂಜನಗೂಡಿನ ಡಗ್ಸ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ನಮ್ಮ ಪೊಲೀಸ್ ಇಲಾಖೆಯ ಬಗ್ಗೆ ಅಪಾರ ಗೌರವವಿದೆ. ಆದರೆ, ರಾಜ್ಯದಲ್ಲಿ ಡ್ರಗ್ಸ್ ಜಾಲ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಹಲವು ಅನುಮಾನಗಳು ಮೂಡುತ್ತಿವೆ. ಸ್ಥಳೀಯ ಪೊಲೀಸರಿಗೆ ಈ ಬಗ್ಗೆ ಮಾಹಿತಿ ಇರಲಿಲ್ಲವೇ? ಪೊಲೀಸರು ನೆಲಮಟ್ಟದಲ್ಲಿ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ. ಇದು ಗುಪ್ತಚರ ಇಲಾಖೆಯ ವೈಫಲ್ಯವನ್ನೂ ಸೂಚಿಸುತ್ತದೆ ಎಂದು ಹೇಳಿದರು.
ದೆಹಲಿ, ಮಹಾರಾಷ್ಟ್ರ, ಗುಜರಾತ್ ಹಾಗೂ ಕೇರಳದ ಪೊಲೀಸರು ರಾಜ್ಯಕ್ಕೆ ಬಂದು ಡ್ರಗ್ಸ್ ಜಾಲವನ್ನು ಪತ್ತೆಹಚ್ಚುತ್ತಿದ್ದಾರೆ. ಆದರೆ, ನಮ್ಮ ಅಧಿಕಾರಿಗಳಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ. ರಾಜ್ಯ ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಿ, ಪೊಲೀಸರಿಗೆ ಮುಕ್ತವಾಗಿ ಕಾರ್ಯನಿರ್ವಹಿಸುವ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮೋದಿ ರೋಡ್ ಶೋಗೆ ಆಹ್ವಾನ:
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮೆಟ್ರೊ ಪಿಂಕ್ ಲೈನ್ ಉದ್ಘಾಟಿಸಿದ ಬಳಿಕ ಮೈಸೂರಿಗೆ ಆಗಮಿಸಲಿದ್ದಾರೆ. ಲಲಿತ್ ಮಹಲ್ ಹೆಲಿಪ್ಯಾಡ್ನಿಂದ ಕಾರ್ಯಕ್ರಮ ನಡೆಯುವ ಸ್ಥಳದವರೆಗೆ ರೋಡ್ ಶೋ ನಡೆಸಲಿದ್ದಾರೆ. ಮಾರ್ಗದ ಎರಡೂ ಬದಿಗಳಲ್ಲಿ ಸಾರ್ವಜನಿಕರು ನಿಂತು ಪ್ರಧಾನಿ ಅವರನ್ನು ಸ್ವಾಗತಿಸಲು ಅವಕಾಶವಿದೆ. ಬಳಿಕ ತಾರಾಲಯ ಉದ್ಘಾಟನೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಸುಮಾರು 8 ಸಾವಿರ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಪಾಸ್ ವಿತರಿಸುತ್ತಿದೆ ಎಂದು ತಿಳಿಸಿದರು.
ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಕೆ.ಎನ್.ಸುಬ್ಬಣ್ಣ ಇತರರಿದ್ದರು.