ದಸರಾ ಪ್ರಾಧಿಕಾರ ರಚನೆಗೆ ಒತ್ತಾಯ: ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ಸಭೆಯಲ್ಲಿ ತೀರ್ಮಾನ

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ವಲಯ ಮಟ್ಟದ ಸಭೆ
ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ವಲಯ ಮಟ್ಟದ ಸಭೆZonal level meeting of Mysore, Mandya, Chamarajanagar and Hassan District Chambers of Commerce and Industry
Published on: 

ಮೈಸೂರು: ಮೈಸೂರು ದಸರಾ ಮಹೋತ್ಸವವನ್ನು ಸುಗಮವಾಗಿ, ಅಚ್ಚುಕಟ್ಟಾಗಿ ಹಾಗೂ ವೈಭವದಿಂದ ಆಯೋಜಿಸುವ ಉದ್ದೇಶದಿಂದ ಪ್ರತ್ಯೇಕ ದಸರಾ ಪ್ರಾಧಿಕಾರ ರಚಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಮೈಸೂರು ವಲಯದ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ಸಭೆಯಲ್ಲಿ ಚರ್ಚಿಸಲಾಯಿತು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ), ಬೆಂಗಳೂರು ಸಹಯೋಗದಲ್ಲಿ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಂಸಿಸಿಐ) ಆತಿಥ್ಯದಲ್ಲಿ ಶುಕ್ರವಾರ ನಡೆದ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ವಲಯ ಮಟ್ಟದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ನಾಲ್ಕು ಜಿಲ್ಲೆಗಳ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿ, ತಮ್ಮ ಜಿಲ್ಲೆಗಳ ವ್ಯಾಪಾರ ಮತ್ತು ಕೈಗಾರಿಕಾ ಕ್ಷೇತ್ರಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಎಫ್‌ಕೆಸಿಸಿಐ ಅಧ್ಯಕ್ಷರ ಗಮನಕ್ಕೆ ತಂದರು.

ಕೆಐಎಡಿಬಿಯಿಂದ ಹಂಚಿಕೆಯಾಗಿರುವ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯಗಳ ಕೊರತೆ, ವ್ಯಾಪಾರ ಪರವಾನಗಿ ಪಡೆಯುವಲ್ಲಿನ ತೊಂದರೆ, ಎಪಿಎಂಸಿ ವರ್ತಕರಿಗೆ ಇ-ಖಾತಾ ನೀಡುವಲ್ಲಿನ ಸಮಸ್ಯೆ, ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವು ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಇದಲ್ಲದೆ, ಕೃಷಿ ತಂತ್ರಜ್ಞಾನ ಮತ್ತು ಕೃಷಿ ಆಧಾರಿತ ಉದ್ಯಮಗಳ ಅಭಿವೃದ್ಧಿ, ನವೀಕರಿಸಬಹುದಾದ ಇಂಧನ, ಕೃತಕ ಬುದ್ಧಿಮತ್ತೆ ಹಾಗೂ ಸೈಬರ್ ಭದ್ರತೆಯಂತಹ ಸಮಕಾಲೀನ ವಿಷಯಗಳ ಬಗ್ಗೆಯೂ ವಿಚಾರ ವಿನಿಮಯ ನಡೆಯಿತು. ದಕ್ಷಿಣ ಭಾರತದ ರಾಜ್ಯಗಳಲ್ಲಿ ಏಕರೂಪದ ರಸ್ತೆ ತೆರಿಗೆ ಜಾರಿಗೊಳಿಸುವ ಮೂಲಕ ಮೈಸೂರು ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಉತ್ತೇಜನ ನೀಡುವ ಬಗ್ಗೆಯೂ ಚರ್ಚಿಸಲಾಯಿತು.

ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಡಾ.ಕೆ.ಬಿ. ಲಿಂಗರಾಜು ಮಾತನಾಡಿ, ಎಫ್‌ಕೆಸಿಸಿಐ ಮತ್ತು ಎಂಸಿಸಿಐ ಸಂಸ್ಥೆಗಳ ನಡುವೆ ಸಹಯೋಗದ ಹೊಸ ಅವಕಾಶಗಳನ್ನು ಗುರುತಿಸಿ, ಪರಸ್ಪರ ಸಹಕಾರದ ಕ್ಷೇತ್ರಗಳನ್ನು ವಿಸ್ತರಿಸುವ ಮೂಲಕ ಸಾಂಸ್ಥಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದರು.

ಎಫ್‌ಕೆಸಿಸಿಐ ಅಧ್ಯಕ್ಷ ಟಿ. ಸಾಯಿರಾಮ್ ಪ್ರಸಾದ್ ಮಾತನಾಡಿ, ಸಭೆಯಲ್ಲಿ ಪ್ರಸ್ತಾಪಿಸಲಾದ ಸಮಸ್ಯೆಗಳನ್ನು ಸಂಬಂಧಪಟ್ಟ ಸರ್ಕಾರಿ ಇಲಾಖೆಗಳ ಗಮನಕ್ಕೆ ತಂದು, ಆದಷ್ಟು ಶೀಘ್ರ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಎಫ್‌ಕೆಸಿಸಿಐ ಹಿರಿಯ ಉಪಾಧ್ಯಕ್ಷ ಬಿ.ಪಿ. ಶಶಿಧರ್, ಉಪಾಧ್ಯಕ್ಷ ಸತೀಶ್ ಎನ್., ಎಪಿಎಂಸಿ ಸಮಿತಿ ಅಧ್ಯಕ್ಷ ಹಾಗೂ ಆಡಳಿತ ಮಂಡಳಿ ಸದಸ್ಯ ಡಿ.ಎಂ. ಶಂಕರಪ್ಪ, ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷ ತ್ರಿವಿಕ್ರಮ್ ಜೋಷಿ ಉಪಸ್ಥಿತರಿದ್ದರು.

ಎಂಸಿಸಿಐ ಗೌರವ ಕಾರ್ಯದರ್ಶಿ ಶಿವಾಜಿರಾವ್ ಎ.ಕೆ. ಸ್ವಾಗತಿಸಿದರು. ಉಪಾಧ್ಯಕ್ಷ ಆರ್. ಆನಂದ್ ವಂದಿಸಿದರು. ಗೌರವ ಖಜಾಂಚಿ ಅಶೋಕ್ ಎಸ್.ಜೆ., ಗೌರವ ಜಂಟಿ ಕಾರ್ಯದರ್ಶಿ ವಿನೋದ್ ಜೈನ್ ಹಾಗೂ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.

ಮಂಡ್ಯ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪ್ರಭಾಕರ್, ಹಾಸನ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಮೈಸೂರು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘದ ಅಧ್ಯಕ್ಷ ವಿಜಯಶಂಕರ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಎಂಸಿಸಿಐ ಪದಾಧಿಕಾರಿಗಳು ಎಫ್‌ಕೆಸಿಸಿಐನ ನೂತನ ಪದಾಧಿಕಾರಿಗಳ ತಂಡವನ್ನು ಸನ್ಮಾನಿಸಿದರು.