

ಹನಗೋಡು : ಹುಣಸೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ ತಿಳಿಸಿದರು.
ಹನಗೋಡು ಹೋಬಳಿಯ ರಾಮೇನಹಳ್ಳಿ, ನಿಲುವಾಗಿಲು ಹಾಗೂ ವಡ್ಡಂಬಾಳು ಗ್ರಾಮಗಳಲ್ಲಿ ಒಟ್ಟು 40 ಲಕ್ಷ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಹುಣಸೂರು ತಾಲೂಕಿಗೆ ಬಿಡುಗಡೆಯಾದ ಯಾವುದೇ ಅನುದಾನವೂ ವಾಪಸ್ ಹೋಗಿಲ್ಲ. ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಅನುದಾನ ಲಭ್ಯವಾಗದಿದ್ದರೂ, ವಿಶೇಷ ಕಾಳಜಿ ವಹಿಸಿ ಹೆಚ್ಚುವರಿ ಅನುದಾನ ತರುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ಹುಣಸೂರು ತಾಲೂಕು ಮುಂಚೂಣಿಯಲ್ಲಿದೆ ಎಂದರು.
ಗ್ರಾಮೀಣ ಭಾಗದ ಜನರ ಬಹುದಿನಗಳ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುತ್ತಿದೆ. ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವುದರಿಂದ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ. ರಸ್ತೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವ ಜತೆಗೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಕಾಮಗಾರಿಗಳಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ತಿಳಿಸಿದರು.
ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಮೂಲಸೌಕರ್ಯ ಕಲ್ಪಿಸುವುದು ನನ್ನ ಆದ್ಯತೆಯಾಗಿದೆ. ಗ್ರಾಮಗಳ ಅಭಿವೃದ್ಧಿಗೆ ಸಾರ್ವಜನಿಕರು ಸಲಹೆ ಮತ್ತು ಸಹಕಾರ ನೀಡಬೇಕು. ಪಕ್ಷಾತೀತವಾಗಿ ಎಲ್ಲರೂ ಕೈಜೋಡಿಸಿದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಹರವೆ ಶ್ರೀಧರ್, ಸತೀಶ್, ಪಾಪಣ್ಣ, ಶಿವಾನಂದ್, ಎಪಿಎಂಸಿ ಮಾಜಿ ಅಧ್ಯಕ್ಷ ಸುಭಾಷ್, ಬಸವರಾಜ್ ಸೇರಿದಂತೆ ಗ್ರಾಮದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ಜೆಡಿಎಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಇದ್ದರು.