ನಾಡು-ನುಡಿಗೆ ಪೂರಕ ಕಾರ್ಯಕ್ರಮಗಳ ಆಯೋಜನೆ

ತಹಸೀಲ್ದಾರ್ ಶ್ರೀನಿವಾಸ್ ಹೇಳಿಕೆ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ
ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ
ಎಚ್.ಡಿ.ಕೋಟೆ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಶ್ರೀನಿವಾಸ್ ಮಾತನಾಡಿದರು. ರವಿಚಂದ್ರ, ರಾಜು, ವೈ.ಪ್ರಸಾದ್, ನೇತ್ರಾವತಿ, ಎಸ್.ಗಂಗಾಧರ್ ಇದ್ದರು.
Published on: 

ಎಚ್.ಡಿ.ಕೋಟೆ: ಗಡಿ ತಾಲೂಕು ಎಚ್.ಡಿ.ಕೋಟೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಕನ್ನಡ ಭಾಷೆ, ನಾಡು-ನುಡಿಯ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 10 ಸಾಧಕರನ್ನು ಸನ್ಮಾನಿಸಲಾಗುವುದು ಎಂದು ತಹಸೀಲ್ದಾರ್ ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಗಡಿ ಭಾಗದಲ್ಲಿರುವ ಎಚ್.ಡಿ.ಕೋಟೆ ತಾಲೂಕಿನಲ್ಲಿ ಕನ್ನಡ ಭಾಷೆಯ ಬೆಳವಣಿಗೆ ಹಾಗೂ ಕನ್ನಡದ ಅಭಿಮಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಎಲ್ಲ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗುವುದು. ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳು ಹಾಗೂ ಸಂಘ-ಸಂಸ್ಥೆಗಳಿಂದ ಆಕರ್ಷಕ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕನ್ನಡದ ಹಿರಿಮೆ, ಸಂಸ್ಕೃತಿ ಹಾಗೂ ಪರಂಪರೆ ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 10 ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ಹೇಳಿದರು.

ಅಧಿಕಾರಿಗಳ ಗೈರಿಗೆ ಆಕ್ಷೇಪ:

ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಗೈರು ಹಾಜರಾಗಿರುವುದಕ್ಕೆ ಮುಖಂಡ ಚೌಡಳ್ಳಿ ಜವರಯ್ಯ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ಶ್ರೀನಿವಾಸ್, ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು. ಈ ಕುರಿತು ಜಿಲ್ಲಾಧಿಕಾರಿಗೂ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷ ಪ್ರಮೋದ್ ಮಾತನಾಡಿ, ಜಿಲ್ಲಾಡಳಿತದಿಂದ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ತಾಲೂಕು ಮಟ್ಟದ ಸಾಧಕರನ್ನು ಪರಿಗಣಿಸಬೇಕು. ಪ್ರಶಸ್ತಿಗೆ ಕೇವಲ ನಗರ ಪ್ರದೇಶದ ಸಾಧಕರನ್ನೇ ಆಯ್ಕೆ ಮಾಡುವುದು ಎಷ್ಟು ಸರಿ? ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕಲೆ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅನೇಕ ಸಾಧಕರಿದ್ದಾರೆ. ಅಂತಹವರನ್ನು ಗುರುತಿಸಿ ಗೌರವಿಸುವ ಕೆಲಸವಾಗಬೇಕು ಎಂದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವೈ.ಪ್ರಸಾದ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ನೇತ್ರಾವತಿ, ಆರಕ್ಷಕ ನಿರೀಕ್ಷಕ ಎಸ್. ಗಂಗಾಧರ್, ಚಂದುಕುಮಾರ್, ಮುಖಂಡರಾದ ಚೌಡಳ್ಳಿ ಜವರಯ್ಯ, ಮಹದೇವಸ್ವಾಮಿ, ಕೆಂಪರಾಜು, ಪುರುಷೋತ್ತಮ, ಶೈಲಜಾ, ದೊಡ್ಡಸಿದ್ದು, ಮಂಜುಕೋಟೆ, ಮಧು, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಮರಿದೇವಯ್ಯ, ಜೀವಿಕ ಬಸವರಾಜು, ಉಮೇಶ್, ಅಕ್ರಂ ಪಾಷ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net