

ಹನಗೋಡು: ಯುವಕರಲ್ಲಿ ಕ್ರೀಡಾಸಕ್ತಿ ಬೆಳೆಸುವುದರ ಜತೆಗೆ ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸಬೇಕು ಎಂದು ಜೆಡಿಎಸ್ ಮುಖಂಡ ಹರವೆ ಶ್ರೀಧರ್ ತಿಳಿಸಿದರು.
ಹನಗೋಡು ಹೋಬಳಿಯ ಹೆಗ್ಗಂದೂರು ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಇಂದಿನ ಯುವಕರು ಮೊಬೈಲ್ ಸೇರಿದಂತೆ ಇತರ ಚಟುವಟಿಕೆಯಲ್ಲಿ ಹೆಚ್ಚಿನ ಸಮಯ ಕಳೆಯುವ ಬದಲು ಕ್ರೀಡೆಗಳತ್ತ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರಿಕೆಟ್‌ನಂತಹ ಕ್ರೀಡೆಗಳು ದೈಹಿಕ ಆರೋಗ್ಯದ ಜತೆಗೆ ಶಿಸ್ತು, ಸಮಯಪ್ರಜ್ಞೆ, ನಾಯಕತ್ವದ ಗುಣ ಹಾಗೂ ತಂಡದೊಂದಿಗೆ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸುವ ಮನೋಭಾವ ಬೆಳೆಸುತ್ತವೆ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಪ್ರತಿಭಾವಂತ ಕ್ರೀಡಾಪಟುಗಳಿದ್ದಾರೆ. ಅವರಿಗೆ ಸೂಕ್ತ ಅವಕಾಶ ಮತ್ತು ಪ್ರೋತ್ಸಾಹ ದೊರೆತರೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಿದೆ. ಇಂತಹ ಪಂದ್ಯಾವಳಿಗಳ ಆಯೋಜನೆಯಿಂದ ಯುವ ಪ್ರತಿಭೆಗಳಿಗೆ ಉತ್ತಮ ವೇದಿಕೆ ಕಲ್ಪಿಸಿದಂತಾಗುತ್ತದೆ. ಸಂಘಟಕರ ಈ ಪ್ರಯತ್ನ ಶ್ಲಾಘನೀಯ ಎಂದರು.
ಆಯೋಜಕರು, ಜೆಡಿಎಸ್ ಮುಖಂಡರು, ಸ್ಥಳೀಯ ಗಣ್ಯರು, ಯುವಕರು ಹಾಗೂ ಕ್ರೀಡಾಭಿಮಾನಿಗಳು ಹಾಜರಿದ್ದರು.