ರೈತರ ಸಮಸ್ಯೆಗಳಿಗೆ ಪ್ರಧಾನಿ ಸ್ಪಂದಿಸಲಿ

* ಮೈಸೂರಿನಲ್ಲಿ ಸ್ಪಷ್ಟ ನಿಲುವು ಪ್ರಕಟಿಸಲಿ * ರಾಜ್ಯ ಕಬ್ಬು ಬೆಳೆಗಾರರ ಸಮನ್ವಯ ಸಮಿತಿ ಆಗ್ರಹ
ಪ್ರಧಾನಿ ಮೋದಿ ಪ್ರಂಬನನ್​ಗೆ ಭೇಟಿ
Published on: 

ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗಂಭೀರವಾಗಿ ಗಮನಹರಿಸಬೇಕು ರಾಜ್ಯ ಕಬ್ಬು ಬೆಳೆಗಾರರ ಸಮನ್ವಯ ಸಮಿತಿ ಒತ್ತಾಯಿಸಿದೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡರಾದ ಕುರುಬೂರು ಶಾಂತಕುಮಾರ್, ಹೊಸಕೋಟೆ ಬಸವರಾಜ್ ಹಾಗೂ ಎಂ.ಮಹೇಶ್, ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರೈತರ ಸಮಸ್ಯೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನಿಲುವು ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಮಳೆ ಕೊರತೆಯಿಂದ ಕಬ್ಬಿನ ಬೆಳೆ ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕಬ್ಬು ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ನ್ಯಾಯಯುತ ಎಫ್‌ಆರ್‌ಪಿ ನಿಗದಿಯಾಗಿಲ್ಲ. ಈ ಸಂಬಂಧ ಎರಡು ತಿಂಗಳಿಂದ ರಾಜ್ಯದ ರೈತರು ಹೋರಾಟ ನಡೆಸುತ್ತಿದ್ದರೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಕಬ್ಬಿಗೆ ಎಸ್‌ಎಪಿ ದರ ನಿಗದಿಪಡಿಸಿಲ್ಲ. ಆದರೆ ಎಫ್‌ಆರ್‌ಪಿ ದರವನ್ನು 4,450 ರೂ. ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಶೇ.10.25ರ ಕನಿಷ್ಠ ಸಕ್ಕರೆ ಇಳುವರಿಗೆ ಪ್ರತಿ ಟನ್ ಕಬ್ಬಿಗೆ 4,500 ರೂ. ದರ ನಿಗದಿಪಡಿಸಬೇಕು. ಈ ಕುರಿತು ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಕಬ್ಬಿನಿಂದ ಉತ್ಪಾದಿಸುವ ಸಕ್ಕರೆಗೆ ವಾಣಿಜ್ಯ ಬಳಕೆ ಮತ್ತು ಸಾಮಾನ್ಯ ಗ್ರಾಹಕರ ಬಳಕೆ ಎಂದು ಪ್ರತ್ಯೇಕ ದರ ನಿಗದಿಪಡಿಸಬೇಕು. ವಾಣಿಜ್ಯ ಬಳಕೆಯ ಸಕ್ಕರೆಗೆ ಹೆಚ್ಚಿನ ದರ ವಿಧಿಸುವ ಮೂಲಕ ದೊರೆಯುವ ಹೆಚ್ಚುವರಿ ಲಾಭವನ್ನು ರೈತರಿಗೆ ಎಫ್‌ಆರ್‌ಪಿ ದರದೊಂದಿಗೆ ಹಂಚಿಕೆ ಮಾಡಬೇಕು. ಅಲ್ಲದೆ, ಎಫ್‌ಆರ್‌ಪಿ ದರವನ್ನು ರೈತರ ಹೊಲದಲ್ಲಿಯೇ ಅನ್ವಯವಾಗುವಂತೆ ನಿಗದಿಪಡಿಸಬೇಕು. ಕಬ್ಬು ಕಟಾವು ಕೂಲಿ ಮತ್ತು ಸಾಗಣೆ ವೆಚ್ಚದ ಹೆಸರಿನಲ್ಲಿ ರೈತರ ಮೇಲೆ ನಡೆಯುತ್ತಿರುವ ಶೋಷಣೆಗೆ ಕಡಿವಾಣ ಹಾಕಬೇಕು ಎಂದು ಮುಖಂಡರು ಒತ್ತಾಯಿಸಿದರು.

ರಾಜ್ಯದ 224 ತಾಲೂಕುಗಳು ಬರಗಾಲಕ್ಕೆ ತುತ್ತಾಗಿದ್ದು, ರೈತರು ಸಾಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬೆಳೆ ಬೆಳೆದರೂ ನಿರೀಕ್ಷಿತ ಇಳುವರಿ ದೊರೆಯದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ರೈತರ ಎಲ್ಲ ಬಗೆಯ ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬರದಿಂದಾಗಿ ರೈತರಿಗೆ ಸುಮಾರು 45 ಸಾವಿರ ಕೋಟಿ ರೂ.ಬೆಳೆ ನಷ್ಟ ಉಂಟಾಗಿದೆ. ಆದರೆ, ರಾಜ್ಯ ಸರ್ಕಾರ ನೀಡುತ್ತಿರುವ ಪರಿಹಾರ ಅತ್ಯಲ್ಪವಾಗಿದೆ. ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್ ಪರಿಹಾರದ ಮಾನದಂಡಗಳನ್ನು ವೈಜ್ಞಾನಿಕವಾಗಿ ಪರಿಷ್ಕರಿಸಿ ಪರಿಹಾರ ಮೊತ್ತ ಹೆಚ್ಚಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಪ್ರತಿ ಎಕರೆಗೆ 25 ಸಾವಿರ ರೂ. ಬರ ಪರಿಹಾರ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದರು.

ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರತಿಕ್ರಿಯೆ ನೀಡಬೇಕು. ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರಗಳನ್ನು ಪ್ರಕಟಿಸಿ, ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಮನ್ವಯ ಸಮಿತಿಯ ಮುಖಂಡರು ಆಗ್ರಹಿಸಿದರು.