

ಸರಗೂರು: ತಾಲೂಕಿನ ಲಂಕೆ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮದ ಆರಾಧ್ಯ ದೈವ ಶ್ರೀ ಶತ್ಯೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಸೋಮವಾರ ಮತ್ತು ಮಂಗಳವಾರ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ಶ್ರೀ ಶತ್ಯೇಶ್ವರ ಸ್ವಾಮಿ ಹಾಗೂ ಬಸವೇಶ್ವರ ಜಾತ್ರಾ ಮಹೋತ್ಸವವು ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕ. ಜಾತ್ರೆಯ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಗ್ರಾಮದ ಪ್ರಮುಖ ಬೀದಿಗಳು ಹಾಗೂ ದೇವಸ್ಥಾನದ ಆವರಣವನ್ನು ತಳಿರು ತೋರಣ, ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು.
ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಧಾರ್ಮಿಕ ಚಟುವಟಿಕೆಗಳು ಆರಂಭಗೊಂಡವು. ಅರ್ಚಕರು ಶ್ರೀ ಶತ್ಯೇಶ್ವರ ಸ್ವಾಮಿಗೆ ವಿಶೇಷ ಅಭಿಷೇಕ, ಪುಷ್ಪಾರ್ಚನೆ, ಅಲಂಕಾರ, ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆರವೇರಿಸಿದರು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ಸಾಗಿ ಸ್ವಾಮಿಯ ದರ್ಶನ ಪಡೆದರು.
ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಜಾತ್ರಾ ಮಹೋತ್ಸವವೂ ನಡೆದಿದ್ದರಿಂದ ಲಂಕೆ ಗ್ರಾಮದಲ್ಲಿ ಜನ ಜಾತ್ರೆಯೇ ನೆರೆದಿತ್ತು. ಗ್ರಾಮದ ಸುತ್ತಮುತ್ತಲಿನ ವಿವಿಧ ಗ್ರಾಮಗಳಿಂದಲೂ ಭಕ್ತರು ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ಶತ್ಯೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರು. ಜಾತ್ರೆ ಅಂಗವಾಗಿ ದನಗಳನ್ನು ಓಟ ಆಯೋಜಿಸಲಾಗಿತ್ತು.