

ಪಿರಿಯಾಪಟ್ಟಣ: ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಾಯಕತ್ವ ಗುಣವನ್ನು ಬೆಳೆಸುವುದರಲ್ಲಿ ಯುವ ಸಂಸತ್ತು ಕಾರ್ಯಕ್ರಮ ಪ್ರಯೋಜನಕಾರಿಯಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ನಂಜುಂಡಸ್ವಾಮಿ ಅಭಿಪ್ರಾಯಪಟ್ಟರು.
ಪಟ್ಟಣದ ಡಿ.ದೇವರಾಜ ಅರಸು ಭವನದಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ, ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಂಸತ್ತು ಮತ್ತು ವಿಧಾನಸಭಾ ಕಾರ್ಯ ಕಲಾಪಗಳನ್ನು ಮಾದರಿಯಾಗಿ ಇಟ್ಟುಕೊಂಡು ಚರ್ಚಿಸುವಾಗ ಯಾವುದೇ ಜಾತಿ, ಮತ, ಧರ್ಮ ಹಾಗೂ ಮಹಾನ್ ವ್ಯಕ್ತಿಗಳಿಗೆ ಚ್ಯುತಿ ಬಾರದಂತೆ ಆರೋಗ್ಯಕರವಾಗಿ ವಿಷಯಗಳನ್ನು ಚರ್ಚಿಸಬೇಕು. ಸಂವಿಧಾನದ ಆಶಯಗಳು ಹಾಗೂ ಪ್ರಜಾಪ್ರಭುತ್ವದ ಗೌರವವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಬೇಕಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ಮಾತನಾಡಿ, ರಾಜ್ಯದಲ್ಲಿ ಹತ್ತಾರು ಸಮಸ್ಯೆಗಳಿದ್ದು ಅಂತಹ ಸಮಸ್ಯೆಗಳನ್ನು ಆಡಳಿತ ಮತ್ತು ವಿರೋಧ ಪಕ್ಷಗಳು ಚರ್ಚೆಯ ಮೂಲಕ ಹೇಗೆ ಬಗೆಹರಿಸುತ್ತವೆ ಎಂಬುದನ್ನು ಇಂತಹ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿ ಕಲಿತರೆ ಉತ್ತಮ ನಾಯಕರಾಗಬಹುದು. ಸಂಸತ್ತು ಮತ್ತು ವಿಧಾನಸಭಾ ಕಲಾಪದ ಜ್ಞಾನ ಪ್ರತಿಯೊಬ್ಬರಿಗೂ ತಿಳಿದಿರಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ ಮಾತನಾಡಿ, ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳಸಿಕೊಳ್ಳಬೇಕು ಎಂದರು.
ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಶಾಂತ್, ಬಿಆರ್‌ಸಿ ಶಿವರಾಜು , ಶಿರಸ್ತೇದಾರ್ ವಿನೋದ್ ಕುಮಾರ್, ಇಸಿಒ ನಂಜುಂಡಸ್ವಾಮಿ, ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ವಕೀಲರ ಸಂಘದ ಅಧ್ಯಕ್ಷ ಧನಪಾಲ್, ಉಪನ್ಯಾಸಕರಾದ ಡಾ.ಎಸ್.ಕೆ.ಮಂಜು, ಆಯಿಷಾ, ರಾಜು ಉಪಸ್ಥಿತರಿದ್ದರು.