

ಮಂಗಳೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪೂರ್ಣ ಅವಧಿ ಪೂರೈಸಲಿದ್ದಾರೆ. ಬಿಜೆಪಿಯಲ್ಲಿ ಭಿನ್ನಮತ, ಗೊಂದಲಗಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಶನಿವಾರ ಸಂಸದರ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪರವರ ನಾಯಕತ್ವದಲ್ಲಿ ನಾವೆಲ್ಲ ಒಟ್ಟಾಗಿ, ಒಂದಾಗಿ ಕೆಲಸ ಮಾಡುತ್ತಿದ್ದೇವೆ. ರಾಜ್ಯ ಬಿಜೆಪಿ ಸರ್ಕಾರ ಸುಭದ್ರವಾಗಿದೆ ಎಂದರು.
ಪಕ್ಷದ ಕೆಲವು ಶಾಸಕರು ಸಭೆ ನಡೆಸಿ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯ, ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ, ಹಾಗೆಂದು ಬಿಜೆಪಿಗೆ ತನ್ನದೇ ಆದ ಶಿಸ್ತಿದೆ. ಪಕ್ಷ ಈ ಹಿಂದೆಯೂ ಅಶಿಸ್ತು ಸಹಿಸಿಲ್ಲ. ಮುಂದೆಯೂ ಸಹಿಸುವುದಿಲ್ಲ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತದೆ ಎಂದರು.
ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಕರೊನಾವನ್ನು ಸಮರ್ಥವಾಗಿ ಎದುರಿಸಿ, ಸಂಕಷ್ಟದ ಕಾಲದಲ್ಲಿ ಜನತೆಗೆ ನೆರವಾಗಿದೆ. ಪಕ್ಷದ ಎಲ್ಲ ಶಾಸಕರು ತಮ್ಮ ಕ್ಷೇತ್ರದಲ್ಲಿ ಕರೊನಾ ವಿರುದ್ಧ ಹೋರಾಡುತ್ತಿದ್ದಾರೆ. ವಿದೇಶದಲ್ಲಿರುವ ಕನ್ನಡಿಗರನ್ನು ಕರೆತರುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಕ್ವಾರಂಟೈನ್ ಕೇಂದ್ರದಲ್ಲಿ ಅವ್ಯವಸ್ಥೆ ಕಂಡು ಬಂದರೆ ತಕ್ಷಣ ಸರಿಪಡಿಸಲಾಗುವುದು.
ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಗಲು ಕನಸು ಕಾಣುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಮೋದಿ ಸಾರಥ್ಯದಲ್ಲಿ ಸಮೃದ್ಧ ಭಾರತ ನಿರ್ಮಾಣ
ಮಂಗಳೂರು: ಅಭೂತಪೂರ್ವ ಜನ ಬೆಂಬಲದೊಂದಿಗೆ ದ್ವಿತೀಯ ಅವಧಿಗೆ ಅಧಿಕಾರ ಪಡೆದ ಬಿಜೆಪಿ ಸರ್ಕಾರ ವರ್ಷ ಪೂರೈಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಮೃದ್ಧ ಭಾರತ ನಿರ್ಮಾಣವಾಗಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಮೋದಿ ಅವರು ಹಲವು ದಿಟ್ಟ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೋಟ್ಯಂತರ ಭಾರತೀಯರ ಕನಸುಗಳನ್ನು ಸಾಕಾರಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು.
ಮೋದಿ ಇಂದು ಭಾರತದಲ್ಲಷ್ಟೇ ಅಲ್ಲ, ವಿಶ್ವದ ಅಗ್ರಗಣ್ಯ ನಾಯಕರಾಗಿ ಮೂಡಿ ಬಂದಿರುವುದು ಪ್ರತಿಯೊಬ್ಬ ಭಾರತೀಯ ಹೆಮ್ಮೆ ಪಡುವ ವಿಷಯ ಎಂದು ಹೇಳಿದರು.
ಚುನಾವಣೆಗೆ ಮುನ್ನ ಬಿಜೆಪಿ ನೀಡಿದ ಭರವಸೆಯನ್ನು ಮೋದಿ ಸರ್ಕಾರ ಈಡೇರಿಸಿದೆ. ಸಂವಿಧಾನದ 370ನೇ ವಿಧಿ ರದ್ದು, ತ್ರಿವಳಿ ತಲಾಕ್ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮತ್ತು ರಾಷ್ಟ್ರೀಯ ನಾಗರಿಕತ್ವ ನೋಂದಣಿ ಜಾರಿ ಮೋದಿ ಸರ್ಕಾರ ಕೈಗೊಂಡ ದಿಟ್ಟ ನಿರ್ಣಯವಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕೋಟ್ಯಂತರ ಭಾರತೀಯರ ಕನಸಾಗಿತ್ತು. ಮೋದಿ ಸರ್ಕಾರದ ಅವಧಿಯಲ್ಲೇ ರಾಮಮಂದಿರ ನಿರ್ಮಾಣದ ಕಾರ್ಯ ಆರಂಭವಾಗಿದೆ ಎಂದರು.
ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನಡೆದ ಸಾಲು ಸಾಲು ಹಗರಣ, ಭ್ರಷ್ಟಾಚಾರದಿಂದ ಕಂಗೆಟ್ಟಿದ್ದ ಜನರಲ್ಲಿ ಮೋದಿ ಸರ್ಕಾರ ಹೊಸ ಭರವಸೆ ಮೂಡಿಸಿದೆ. ಮೇಕ್ ಇನ್ ಇಂಡಿಯಾ, ಜನಧನ ಯೋಜನೆ, ಸ್ಕಿಲ್ ಇಂಡಿಯಾ, ಕಿಸಾನ್ ಕ್ರೆಡಿಟ್ ಕಾರ್ಡ್ ಮುಂತಾದ ಯೋಜನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ ಎಂದರು.
ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸುದರ್ಶನ ಎಂ, ವಕ್ತಾರ ಜಗದೀಶ ಶೇಣವ ಉಪಸ್ಥಿತರಿದ್ದರು.