

ಮೈಸೂರು: ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಜೂ.4 ರಂದು ಬೆಳಗ್ಗೆ 10.30ಕ್ಕೆ ಕಲಾಮಂದಿರದಲ್ಲಿ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಲ್ವಡಿ ಜಯಂತಿ ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಎಲ್ಲ ಸಮುದಾಯದವರು ಸೇರಿ ಆಚರಣೆ ಮಾಡಲಾಗುವುದು. ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ನಗರದಲ್ಲಿ ಆಚರಿಸಲಾಗುತ್ತಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರಿನ ರಾಜರಾಗಿ ಮೈಸೂರು ನಿರ್ಮಾಣ ಮಾಡುವಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಜಯಂತಿಯನ್ನು ನಮ್ಮ ಮನೆಯ ಹಬ್ಬದ ರೀತಿ ಆಚರಿಸಬೇಕು. ಅವರ ಆದರ್ಶಗಳನ್ನು ನಮ್ಮ ಮುಂದಿನ ಪೀಳಿಗೆ ಅಳವಡಿಸಿಕೊಂಡು ಹೋಗುವ ಹಾಗೆ ಅರ್ಥಪೂರ್ಣವಾಗಿ ಜಯಂತಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಂ ಡಿ ಸುದರ್ಶನ್ ಮಾತನಾಡಿ, ಮೆರವಣಿಗೆ ಅರಮನೆಯ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಢು ಕಲಾಮಂದಿರದಲ್ಲಿ ಅಂತ್ಯಗೊಳ್ಳಲಿದೆ. ಮೆರವಣಿಗೆಗೆ ಕಲಾ ತಂಡಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನೀಡಲಾಗುವುದು. ಬೆಳ್ಳಿ ರಥದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರ ಮೆರವಣಿಗೆ ಮಾಡಲಾಗುವುದು. ಮೆರವಣಿಗೆಯಲ್ಲಿ ಅಶ್ವಾರೋಹಿದಳ ಹಾಗೂ ಪೊಲೀಸ್ ಬ್ಯಾಂಡ್ ಭಾಗವಹಿಸಲಿದೆ. ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಅತಿಥಿ ಗಣ್ಯರನ್ನು ಆಹ್ವಾನಿಸಲಾಗುವುದು. ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು ಎಂದರು.
ಮೆರವಣಿಗೆ ಸ್ಥಳ, ವೇದಿಕೆ ಸ್ಥಳ ಹಾಗೂ ಕಲಾಮಂದಿರ ಆವರಣದ ಸ್ವಚ್ಚತೆಯನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ ತಿಂಡಿ ವ್ಯವಸ್ಥೆ ಹಾಗೂ ಮೈಮುಲ್ ವತಿಯಿಂದ 2000 ಜನರಿಗೆ ಮಜ್ಜಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಸಮುದಾಯದ ಮುಖಂಡರು ಮಾತನಾಡಿ, ಕಳೆದ ವರ್ಷ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ನೀತಿ ಸಂಹಿತೆ ಇದ್ದದ್ದರಿಂದ ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗಿಲ್ಲ. ನಾಲ್ವಡಿ ಜಯಂತಿಯನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಆಚರಣೆ ಮಾಡಬೇಕು. ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳು ಜಯಂತಿಯಲ್ಲಿ ಭಾಗವಹಿಸಬೇಕು. ಶಾಲೆಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆದರ್ಶಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ಜಿಲ್ಲಾ ಹಾಗೂ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಹಾಗೂ ಇತರರು ಇದ್ದರು.