ಬಿಜೆಪಿ ಯೋಜನೆಗಳಿಗೆ ಕಾಂಗ್ರೆಸ್ ನಾಯಕರ ಹೆಸರು

ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಸಂಸದ ಡಾ ಕೆ. ಸುಧಾಕರ್, ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್, ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಮತ್ತಿತರರು ಇದ್ದರು.
10 cbp2
ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಸಂಸದ ಡಾ ಕೆ. ಸುಧಾಕರ್, ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್, ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಮತ್ತಿತರರು ಇದ್ದರು.
Published on

ಸಂಸದ ಡಾ.ಕೆ. ಸುಧಾಕರ್ ವ್ಯಂಗ್ಯ ಎತ್ತಿನಹೊಳೆ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

ಚಿಕ್ಕಬಳ್ಳಾಪುರ: ಬಿಜೆಪಿ ಅವಧಿಯಲ್ಲಿ ಕೈಗೊಂಡಿದ್ದ ಅಭಿವೃದ್ಧಿ ಯೋಜನೆಗಳಿಗೆ ಕಾಂಗ್ರೆಸ್ ನಾಯಕರು ಟೇಪ್ ಕತ್ತರಿಸಿ ಹೆಸರು ಪಡೆದುಕೊಳ್ಳುತ್ತಿದ್ದಾರೆ ಎಂದು ಸಂಸದ ಡಾ. ಕೆ.ಸುಧಾಕರ್ ವ್ಯಂಗ್ಯವಾಡಿದರು.
ನಗರದಲ್ಲಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
ಎತ್ತಿನಹೊಳೆ ಯೋಜನೆಯಡಿ ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರಕ್ಕೆ ನೀರು ಬಂದಿಲ್ಲ. ಬಿಜೆಪಿ ಸರ್ಕಾರ ಯೋಜನೆಗೆ 9,200 ಕೋಟಿ ರೂ. ಅನುದಾನ ನೀಡಿದೆ. ಆದರೆ, ಈ ಬಗ್ಗೆ ಕಾಂಗ್ರೆಸ್ ನಾಯಕರು ಒಂದೇ ಒಂದು ಮಾತು ಹೇಳುತ್ತಿಲ್ಲ. ಮನಸ್ಸು ಮಾಡಿದ್ದರೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಯೋಜನೆ ಕಾಮಗಾರಿ ಉದ್ಘಾಟನೆ ನೆರವೇರಿಸಬಹುದಾಗಿತ್ತು ಎಂದ ಅವರು, ಈಗಲೂ ಕಾಂಗ್ರೆಸ್ ಸರ್ಕಾರವೇ ಹೆಸರು ಪಡೆದುಕೊಳ್ಳಲಿ, ಆದರೆ, ಎರಡನೇ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಿ. ಜತೆಗೆ ಹಳೇ ವಿನ್ಯಾಸದಂತೆಯೇ ಯೋಜನೆಯನ್ನು ಅನುಷ್ಠಾನಗೊಳಿಸಲಿ ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಮೆಗಾ ಡೇರಿ ಮಾತ್ರ ನಿರ್ಮಾಣವಾಗಿದೆ. ಇನ್ನೂ ಪ್ಯಾಕೆಟ್, ಪನ್ನೀರ್ ಘಟಕ ಸ್ಥಾಪನೆ ಬಾಕಿ ಇದೆ. ಇದರ ನಡುವೆ ಐಸ್‌ಕ್ರೀಂ ಘಟಕವನ್ನು ಚಿಂತಾಮಣಿಗೆ ತೆಗೆದುಕೊಂಡು ಹೋಗಲಾಗಿದೆ. ಡೇರಿಯಲ್ಲಿ 5 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಉತ್ಪಾದನೆ ಹೆಚ್ಚಳವಾದರೆ ಅದಕ್ಕೆ ಯಾವುದೇ ಸೌಲಭ್ಯವಿಲ್ಲ. ರಾಜಕೀಯ ದೃಷ್ಟಿಕೋನದಿಂದ ಎಲ್ಲವನ್ನೂ ನೋಡುತ್ತಿರುವುದೇ ಸಮಸ್ಯೆಗೆ ಕಾರಣವಾಗಿದೆ. ರೈತರಿಗೆ ಬೇರೆ ಕಡೆ ಮಾರುಕಟ್ಟೆಗೆ ಜಾಗ ಮಂಜೂರಾಗಿದೆ. ರೇಷ್ಮೆ ಹೈಟೆಕ್ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಹಿಂದಿನ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದು, ಇದರಲ್ಲೂ ಕಾಂಗ್ರೆಸ್ ನಾಯಕರು ಹೆಸರು ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಆರೋಗ್ಯ ಸಚಿವರು ಜಿಲ್ಲೆಗೆ ಭೇಟಿ ನೀಡಿದರೆ ಇಲ್ಲಿ ಮೆಡಿಕಲ್ ಕಾಲೇಜು ಹೇಗೆ ಭವ್ಯವಾಗಿ ನಿರ್ಮಾಣವಾಗಿದೆ ಎನ್ನುವುದನ್ನು ತೋರಿಸುತ್ತೇನೆ ಎಂದರು.
ಬಿಎಂಟಿಸಿ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್, ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಅನಿಲ್, ಮುಖಂಡರಾದ ಮರಳುಕುಂಟೆ ಕೃಷ್ಣಮೂರ್ತಿ, ಪಿ.ಎನ್. ಚೆನ್ನಾಕೃಷ್ಣರೆಡ್ಡಿ, ರಾಜಣ್ಣ ಮತ್ತಿತರರು ಹಾಜರಿದ್ದರು.


1 ಲಕ್ಷ ನೋಂದಣಿ ಗುರಿ
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಜನರ ಹೆಸರು ನೋಂದಾಯಿಸುವ ಗುರಿ ಹೊಂದಲಾಗಿದೆ ಎಂದು ಡಾ.ಕೆ. ಸುಧಾಕರ್ ತಿಳಿಸಿದರು. ಯಾವುದೇ ಪಕ್ಷಕ್ಕೆ ಪ್ರಮುಖ ಆಧಾರಸ್ತಂಭ ಸಕ್ರಿಯ ಕಾರ್ಯಕರ್ತರು. ವಿಶ್ವದಲ್ಲಿಯೇ ಬಿಜೆಪಿ ಅತಿದೊಡ್ಡ ರಾಜಕೀಯ ಪಕ್ಷವಾಗಿದ್ದು, ಸುಮಾರು 20 ಕೋಟಿ ಸದಸ್ಯರನ್ನು ಹೊಂದಿದೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 2.10 ಲಕ್ಷ ಮತದಾರರಿದ್ದು, ಇಲ್ಲಿ ಹೆಚ್ಚಿನ ಜನರನ್ನು ಬಿಜೆಪಿ ಕುಟುಂಬದ ಸದಸ್ಯರನ್ನಾಗಿಸಲು ಕಾರ್ಯಕರ್ತರು ಶ್ರಮಿಸಬೇಕು. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 1 ಲಕ್ಷ ಜನರ ಹೆಸರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ. ಇದಕ್ಕೆ ಒಂದು ಬೂತ್ ವ್ಯಾಪ್ತಿಯಲ್ಲಿ ಶೇ.50 ಜನರನ್ನು ಸದಸ್ಯರನ್ನಾಗಿಸಿದರೆ ಮುಂದಿನ ಚುನಾವಣೆಗೆ ಅನುಕೂಲವಾಗುತ್ತದೆ ಎಂದರು.

ಚುನಾವಣೆ ಗೆಲ್ಲಲು ವಾಮಮಾರ್ಗ
ಪ್ರತಿಯೊಂದು ಚುನಾವಣೆಯಲ್ಲೂ ಕಾಂಗ್ರೆಸ್ ವಾಮಮಾರ್ಗದ ಮೂಲಕ ಗೆಲ್ಲಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರವು ಬಿಜೆಪಿ ಕಾರ್ಯಕರ್ತರ ವಿರುದ್ಧ ದ್ವೇಷ ಸಾಧಿಸಿದರೆ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಸಂಸದ ಡಾ.ಕೆ. ಸುಧಾಕರ್ ಕರೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net