

ವಿಜಯವಾಣಿ ಸುದ್ದಿಜಾಲ ಉಡುಪಿ
ಪ್ರಮುಖ ಮೂಲ ಸೌಕರ್ಯವಾದ ಆರೋಗ್ಯ ಸೇವೆಗಾಗಿ ಜನಸಾಮಾನ್ಯರಿಗೆ ದೂರ ಪ್ರಯಾಣ ತಪ್ಪಿಸುವ ಹಿನ್ನೆಲೆಯಲ್ಲಿ ಜನವಸತಿ ಪ್ರದೇಶಗಳಲ್ಲಿಯೇ "ನಮ್ಮ ಕ್ಲಿನಿಕ್' ಎಂಬ ಆರೋಗ್ಯ ಟಕ ತೆರಯಲಾಗುತ್ತಿದೆ. ಇಲ್ಲಿಯೇ ಜನರು ಸುಲಭವಾಗಿ ಹಾಗೂ ಉಚಿತವಾಗಿ ಆರೋಗ್ಯ ಸೇವೆ ಪಡೆದುಕೊಳ್ಳಬಹುದಾಗಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದರು.
ಉಡುಪಿ ತಾಲೂಕು ಆರೋಗ್ಯ ಅಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಕ್ಲಿನಿಕ್ನಲ್ಲಿ ಒಟ್ಟು 12 ಆರೋಗ್ಯ ಸೇವೆ ಒದಗಿಸಲಾಗುತ್ತದೆ. ಅದರಲ್ಲಿ ವೈದ್ಯಾಧಿಕಾರಿಗಳು, ಪ್ರಯೋಗ ಶಾಲಾ ತಂತ್ರಜ್ಞರು, ಶುಶ್ರೂಷಣಾಧಿಕಾರಿ, ಗ್ರೂಪ್ ಡಿ ನೌಕರರು ತಲಾ ಒಬ್ಬರಂತೆ ಬೆಳಗ್ಗೆ 9ರಿಂದ ಸಂಜೆ 4:30ರ ವರೆಗೆ ಕಾರ್ಯನಿರ್ವಹಿಸಲಿದ್ದಾರೆ ಎಂದರು.
ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ನಗಾರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ ಕಾಂಚನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಜಿ. ಹುಬ್ಬಳ್ಳಿ, ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ, ನಮ್ಮ ಕ್ಲಿನಿಕ್ನ ವೈದ್ಯಾಧಿಕಾರಿಗಳು, ಸ್ಥಳಿಯ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಇಲಾಖಾ ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಕಾರ್ಯಕ್ರಮ ನಿರ್ವಹಿಸಿದರು.