ಆಮಿಷಕ್ಕೊಳಗಾಗದೇ ಅರ್ಹರೆಲ್ಲರೂ ಮತದಾನ ಮಾಡಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸಲಹೆ

Cycle jatha)
Published on

ಮಂಡ್ಯ: ವಿಧಾನಸಭಾ ಚುನಾವಣೆಯ ಮತದಾನ ಮೇ.10ರಂದು ನಡೆಯಲಿದೆ. ಎಲ್ಲ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ತಪ್ಪದೇ ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.

ನಗರದ ಪೊಲೀಸ್ ಕಾಲನಿಯಲ್ಲಿರುವ ಸರ್ಕಾರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಬಾವುಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಮೂಲ್ಯವಾದ ಶಕ್ತಿ ಮತದಾನದ ಹಕ್ಕನ್ನು ನಮಗೆ ನೀಡಲಾಗಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕೆಂಬುದು ಸ್ವೀಪ್ ಕಾರ್ಯಕ್ರಮಗಳ ಉದ್ದೇಶ. ಈಗಾಗಲೇ ಜಿಲ್ಲಾಡಳಿತ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿ 18 ವರ್ಷ ಮೇಲ್ಪಟ್ಟವರಿಂದ ಅರ್ಜಿ ಸ್ವೀಕರಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದೆ. ಕಡಿಮೆ ಮತದಾನವಾಗಿರುವ ಮತಗಟ್ಟೆ ವ್ಯಾಪ್ತಿಯಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಮಂಡ್ಯ ರಾಜ್ಯದಲ್ಲೇ ರಾಜಕೀಯವಾಗಿ ಸೂಕ್ಷ್ಮತೆ, ಪ್ರಕ್ರಿಯೆ ಹಾಗೂ ಸಾಕ್ಷರತೆ ಹೊಂದಿರುವ ಜಿಲ್ಲೆ. 2018ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ.72ರಷ್ಟು ಹಾಗೂ ಮಂಡ್ಯ ಜಿಲ್ಲೆಯಲ್ಲಿ ಶೇ.82.37ರಷ್ಟು ಮತದಾನ ನಡೆದಿದೆ. ಆದರೂ ಜಿಲ್ಲೆಯ ನಗರ ಪ್ರದೇಶದಲ್ಲಿ ಮತದಾನದ ಪ್ರಮಾಣ ಕಡಿಮೆ ಇರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಪ್ರತಿ ಮತವು ಅಮೂಲ್ಯವಾಗಿರುವುದರಿಂದ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವುದರೊಂದಿಗೆ ದೇಶದ ಅಭಿವೃದ್ಧಿಗೆ ಸಹಕಾರ ನೀಡಬಹುದು. ಹಿರಿಯ ನಾಗರಿಕರು, ಅಂಗವಿಕಲರು ಮತದಾನ ಮಾಡಲು ಎಲ್ಲ ರೀತಿಯ ವ್ಯವಸ್ಥೆಗಳನ್ನು ಮತಗಟ್ಟೆಗಳಲ್ಲಿ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಪ್ರತಿಜ್ಞಾವಿಧಿ ಬೋಧಿಸಿದರು. ಜಿಪಂ ಉಪಕಾರ್ಯದರ್ಶಿ ಸಂಜೀವಪ್ಪ, ಸ್ವೀಪ್ ಐಕಾನ್ ಡಾ.ಎಂ.ಎಸ್.ಚಲುವರಾಜು, ಡಿಡಿಪಿಐ ಎಸ್.ಟಿ.ಜವರೇಗೌಡ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಂಜುನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂ ಪ್ರಕಾಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸೀತಾಲಕ್ಷ್ಮೀ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ, ನೆಹರೂ ಯುವ ಕೇಂದ್ರದ ಹರ್ಷ ಇತರರಿದ್ದರು.

ಸೈಕಲ್ ಜಾಥಾ: ಪೊಲೀಸ್ ಕಾಲನಿಯ ಸರ್ಕಾರಿ ಶಾಲಾ ಆವರಣದಿಂದ ಹೊರಟ ಸೈಕಲ್ ಜಾಥಾ ಬನ್ನೂರು ರಸ್ತೆ, ನೂರಡಿ ರಸ್ತೆ, ಆರ್.ಪಿ ರಸ್ತೆ, ಜಯಚಾಮರಾಜೇಂದ್ರ ಒಡೆಯರ್ ವೃತ್ತದ ಮೂಲಕ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಹತ್ತಿರ ಮುಕ್ತಾಯವಾಯಿತು. ಜಿಲ್ಲಾಮಟ್ಟದ ಅಧಿಕಾರಿಗಳು ಸೈಕಲ್ ಜಾಥಾದಲ್ಲಿ ಭಾಗವಹಿಸುವ ಮೂಲಕ ಜಾಗೃತಿ ಮೂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net