ನಂತೂರು-ಕೆಪಿಟಿ ಮೇಲ್ಸೇತುವೆ ತ್ವರಿತ ಅನುಷ್ಠಾನಕ್ಕೆ ಸಂಸದ ಸೂಚನೆ

brijesh Chauta
Published on

ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಂತೂರು ಮತ್ತು ಕೆಪಿಟಿ ಜಂಕ್ಷನ್‌ಗಳಲ್ಲಿ ವಾಹನ ಮೇಲ್ಸೇತುವೆಗಳನ್ನು (ವಿಒಪಿ) ನಿರ್ಮಿಸುವ ಯೊಜನೆಗಳ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಎನ್‌ಎಚ್‌ಎಐ ಅಧಿಕಾರಿಗಳಿಗೆ ಸೂಚಿಸಿದರು.

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜರುಗಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ನಿರ್ದಿಷ್ಟವಾದ ಯೊಜನೆಯನ್ನು ರೂಪಿಸಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಬಿ.ಸಿ.ರೋಡ್ ಮತ್ತು ಸುರತ್ಕಲ್ ನಡುವಿನ ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಕುರಿತು ಸರ್ಕಾರಕ್ಕೆ ಶೀಘ್ರವೇ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಕುಂಟಿಕಾನದಿಂದ ಪಂಪ್‌ವೆಲ್ವರೆಗೆ ಮೇಲ್ಸೇತುವೆ ಅಭಿವೃದ್ಧಿಪಡಿಸಲು ಪ್ರಸ್ತಾವನೆ

ಕುಂಟಿಕಾನದಿಂದ ಪಂಪ್‌ವೆಲ್ವರೆಗೆ ಮೇಲ್ಸೇತುವೆ ಅಭಿವೃದ್ಧಿಪಡಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಜ್ಮಿ ಹೇಳಿದರು. ರಾಷ್ಟ್ರೀಯ ಹೆದ್ದಾರಿ 169ರ ಅಭಿವೃದ್ಧಿಗೆ ಭೂಸ್ವಾಧೀನಪಡಿಸಿಕೊಳ್ಳಲು ನೀಡಬೇಕಾದ ಪರಿಹಾರದ ಬಗ್ಗೆ ಸಂಸದರು ನಿವಾಸಿಗಳೊಂದಿಗೆ ಸಭೆ ನಡೆಸಿದರು.

ಶಾಸಕ ಡಿ.ವೇದವ್ಯಾಸ್ ಕಾಮತ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ, ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಆಂಟನಿ ಎಸ್. ಮರಿಯಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net