ಉದ್ಯೋಗ ಖಾತ್ರಿ ಕೂಲಿ ಹೆಚ್ಚಳ ಮಾಡಲು ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳ ಆಗ್ರಹ

230720 Koppal Karnataka Farmers Union Protest
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಕುಷ್ಟಗಿ ತಾಪಂ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
Published on

ಕುಷ್ಟಗಿ: ಉದ್ಯೋಗ ಖಾತ್ರಿ ಯೋಜನೆಯ ಕೂಲಿ 600 ರೂ.ಗೆ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ತಾಪಂ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಕೆಲಸ ಕೇಳಿ ಬರುವ ಪ್ರತಿಯೊಬ್ಬರಿಗೂ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ನೀಡಬೇಕು. ಯೋಜನೆ ಅಡಿ ವರ್ಷಕ್ಕೆ 200ದಿನ ಕೆಲಸ ನೀಡಬೇಕು. ಕೂಲಿ ಹಣ ಹೆಚ್ಚಿಸಿ ಸಕಾಲಕ್ಕೆ ಪಾವತಿಸಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು. ಕೃಷಿಯನ್ನು ಕಾರ್ಪೋರೇಟ್ ಕಂಪನಿಗಳಿಗೆ ವಹಿಸುವ ಭೂ ಹಾಗೂ ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ಎಲ್ಲ ವರ್ಗದ ಕಾರ್ಮಿಕರಿಗೆ ಲಾಕ್ ಡೌನ್ ಅವಧಿಯ ವೇತನ ಪಾವತಿಸಬೇಕು. ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಮಾಸಿಕ 10 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಬೇಕು. ಆದಾಯ ತೆರಿಗೆ ವ್ಯಪ್ತಿಗೊಳಪಡದ ಪ್ರತಿ ಕುಟುಂಬಕ್ಕೆ ಮಾಸಿಕ 7500 ರೂ. ಕೋವಿಡ್ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಉಪಾಧ್ಯಕ್ಷ ಆರ್.ಕೆ.ದೇಸಾಯಿ, ಸಿಐಟಿಯುನ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ಸಿಡ್ಲಬಾವಿ, ಗೋವಿಂದಪ್ಪ ಕಲಾವತಿ ಮೇಣೆಧಾಳ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net