

ಉಡುಪಿ: ಯುವಜನರಲ್ಲಿ ಮಾದಕ ದ್ರವ್ಯ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವ್ಯಸನ ಮುಕ್ತ ಸುಸ್ಥಿರ ಸಮಾಜ ನಿಮಾರ್ಣ ಪ್ರತಿಯೊಬ್ಬರ ಆದ್ಯತೆಯಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಬುಧವಾರ ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನ ಐದನೇ ವಾರ್ಷಿಕೋತ್ಸವದ ಅಂಗವಾಗಿ ಮಾದಕ ವಸ್ತು ಸೇವನೆ ವಿರುದ್ಧ ಪ್ರತಿಜ್ಞಾ ವಿಧಿ ಬೋಧಿಸಿ, ಮಾತನಾಡಿದರು.
ಮಾದಕ ವ್ಯಸನವು ಬಹುದೊಡ್ಡ ಸಾಮಾಜಿಕ ಪಿಡುಗಾಗಿದ್ದು, ಕೆಲವರು ಅತೀ ಚಿಕ್ಕ ವಯಸ್ಸಿಗೆ ಮಾದಕ ವಸ್ತುಗಳ ದಾಸರಾಗಿ ತಮ್ಮ ಅಮೂಲ್ಯ ಜೀವವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ವ್ಯಕ್ತಿಯು ಯಾವುದೇ ವ್ಯಸನಕ್ಕೆ ಒಳಗಾದಲ್ಲಿ ಕುಟುಂಬ, ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೇ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸುತ್ತದೆ ಎಂದರು.
ಯುವಶಕ್ತಿ ದೇಶದ ಆಸ್ತಿ. ಯುವಪೀಳಿಗೆ ಸಾಮಾಜಿಕ ಮತ್ತು ವೈಯಕ್ತಿಕ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸಿಕೊಂಡು ವ್ಯಸನಮುಕ್ತ ಸಮಾಜಕ್ಕೆ ಕೊಡುಗೆ ನೀಡಬೇಕು. ಮಾದಕ ದ್ರವ್ಯ ಸೇವನೆಯ ಚಟಕ್ಕೆ ಒಳಗಾಗುವುದಿಲ್ಲ ಎಂಬ ಧೃಢವಾದ ನಿಲುವು ಹೊಂದಬೇಕು. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಮಾದಕ ವಸ್ತುಗಳ ಬಳಕೆ, ಮಾರಾಟವಾಗುತ್ತಿರುವ ಬಗ್ಗೆ ಮಾಹಿತಿ ದೊರೆತಲ್ಲಿ ಶಾಲಾ ಮುಖ್ಯಸ್ಥರ ಗಮನಕ್ಕೆ ತರಬೇಕು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್, ಡಯಟ್ ಪ್ರಾಂಶುಪಾಲ ಡಾ.ಅಶೋಕ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಸ್ವಾಗತಿಸಿ, ಕನ್ನಡ ಭಾಷಾ ಶಿಕ್ಷಕಿ ತಾರಾಮತಿ ನಿರೂಪಿಸಿ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ ವಂದಿಸಿದರು.