

ಮಂಗಳೂರು: ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಮತ್ತು ಮಂಗಳೂರು ನಗರ ಪೊಲೀಸ್ ಇಲಾಖೆಯ ಜಂಟಿ ಆಶ್ರಯದಲ್ಲಿ ಕೇಂದ್ರ ಸರ್ಕಾರದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಸೂಚನೆಯಂತೆ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಾಷ್ಟೀಯ ರ‌್ಯಾಗಿಂಗ್ ವಿರೋಧಿ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್, ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ರಘು ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು.
ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಮಾತನಾಡಿ, ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾಗಿದೆ, ಈ ನಿಟ್ಟಿನಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಸಮಾನ ಗೌರವ ಮತ್ತು ಅವಕಾಶಗಳನ್ನು ನೀಡುವ ಮೂಲಕ ರ‌್ಯಾಗಿಂಗ್ ಸಂಬಂಧಿಸಿದ ಯಾವುದೇ ವಿಚಾರಗಳು ಕಾಲೇಜಿನಲ್ಲಿ ನಡೆಯದಂತೆ ನೋಡಿಕೊಳ್ಳುವುದು ವಿದ್ಯಾರ್ಥಿಗಳ, ಉನ್ನತ ಶಿಕ್ಷಣ ಸಂಸ್ಥೆಗಳ ಹಾಗೂ ಕಾಲೇಜಿನ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳ ಕರ್ತವ್ಯ ಎಂದರು.
ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಮುಖ್ಯಸ್ಥ ಡಾ. ರಾಮಕೃಷ್ಣ ಎನ್. ಹೆಗಡೆ ಅಧ್ಯಕ್ಷತೆ ವಹಿಸಿದರು. ಶ್ರೀನಿವಾಸ್ ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಬಿ.ಎಂ. ಪ್ರವೀಣ್ ಕುಮಾರ್, ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕ ಪ್ರೊ. ತ್ರಿವಿಕ್ರಮ ಪ್ರಭು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕ ಪ್ರೊ. ಕೆ. ಶ್ರೀನಾಥ್ ರಾವ್ ಹಾಗೂ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ರ‌್ಯಾಗಿಂಗ್ ವಿರೋಧಿ ಸಮಿತಿ ಮತ್ತು ಎನ್‌ಎಸ್‌ಎಸ್ ಸಮಿತಿಗಳ ಸದಸ್ಯರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿಗಳಿಗೆ ರ‌್ಯಾಗಿಂಗ್ ವಿರೋಧ ಕುರಿತು ಹೆಚ್ಚಿನ ಅರಿವು ಮೂಡಿಸಲು ಪೋಸ್ಟರ್ ಮೇಕಿಂಗ್ ಮತ್ತು ರೀಲ್ ಮೇಕಿಂಗ್ ಸ್ಪರ್ಧೆ ಆಯೋಜಿಸಲಾಗಿತ್ತು.
ಡಾ. ಬಿ. ಎಂ. ಪ್ರವೀಣ್ ಕುಮಾರ್ ಸ್ವಾಗತಿಸಿದರು. ಪ್ರೊ. ತ್ರಿವಿಕ್ರಮ ಪ್ರಭು ವಂದಿಸಿದರು.