

ನಾಗಮಂಗಲ: ದೇಸಿ ಕ್ರೀಡೆ ಕಬಡ್ಡಿ ಕ್ರೀಡಾಪಟುಗಳು ದೇಶಕ್ಕೆ ಸಾಂಸ್ಕೃತಿಕ ರಾಯಭಾರಿ ಇದ್ದಂತೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.
ತಾಲೂಕಿನ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವ 67ನೇ ರಾಷ್ಟ್ರಮಟ್ಟದ 19 ವರ್ಷದೊಳಗಿನವರ ಕಬಡ್ಡಿ ಟೂರ್ನಿಯನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ 8 ವರ್ಷದ ನಂತರ 19 ವರ್ಷದೊಳಗಿನ ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡೆ ನಡೆಯುತ್ತಿದೆ. ಆದಿಚುಂಚನಗಿರಿ ಕ್ಷೇತ್ರದ ಸಹಕಾರದಲ್ಲಿ ನಡೆಯುತ್ತಿರುವ ಈ ಕ್ರೀಡೆ ಉತ್ತಮವಾಗಿ ಏರ್ಪಟ್ಟಿದೆ. ಇದಕ್ಕೆ ಸಹಕರಿಸಿದ ಕ್ಷೇತ್ರದ ಪೀಠಾಧ್ಯಕ್ಷರಿಗೆ ಗೌರವ ನಮನಗಳು ಎಂದರು.
ಮಕ್ಕಳು ಚಿಕ್ಕವಯಸ್ಸಿನಲ್ಲಿಯೇ ಎಲ್ಲ ಕ್ರೀಡೆಯನ್ನು ಕಲಿಯಬೇಕು. ಕಬಡ್ಡಿ ಕ್ರೀಡೆಯಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು ರಾಜ್ಯ ಹಾಗೂ ದೇಶದ ಕೀರ್ತಿ ಹೆಚ್ಚಿಸಿ. 29 ರಾಜ್ಯದಿಂದ ಬಂದಿರುವ ಕ್ರೀಡಾಪಟುಗಳಿಗೂ ಶುಭಾಶಯಗಳು. ಶಿವಮೊಗ್ಗದಲ್ಲಿ ಜ.29ರಂದು ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ. ಈ ಮೂಲಕ ಕರ್ನಾಟಕ ಎರಡು ರಾಷ್ಟ್ರಮಟ್ಟದ ಕ್ರೀಡೆಗಳಿಗೆ ಸಾಕ್ಷಿಯಾಗಲಿದೆ ಎಂದರು.
ಸಾನಿಧ್ಯ ವಹಿಸಿದ್ದ ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ದೇಶದ ವಿವಿಧ ರಾಜ್ಯಗಳಿಂದ ಕಬಡ್ಡಿ ಕ್ರೀಡಾಪಟುಗಳು ಭಾಗವಹಿಸಿದ್ದು, ತಮ್ಮ ರಾಜ್ಯವನ್ನು ಪ್ರತಿನಿಧಿಸುವ ಅವಕಾಶ ನಿಮಗೆ ಸಿಕ್ಕಿದೆ. ಅವಕಾಶ ಸದ್ಬಳಕೆ ಮಾಡಿಕೊಂಡು ತಮ್ಮ ರಾಜ್ಯದ ಕೀರ್ತಿ ಹೆಚ್ಚಿಸಿ. ಭಾರತ ಯುವಕರೇ ತುಂಬಿದ ದೇಶವಾಗಿದೆ. ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸಿ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಯುವಕರು ಉತ್ತಮ ಸಾಧನೆ ಮಾಡಿ ಎಂದರು.
ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥಸ್ವಾಮೀಜಿ, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿಂಧು, ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕ ಡಾ.ಗುಬ್ಬಿಗೂಡು ರಮೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಲುವಯ್ಯ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ ಇತರರಿದ್ದರು.