

ಉಡುಪಿ: ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಬಲಿಷ್ಠರಾಗುತ್ತಾರೆ. ಹೊಸ ಶಿಕ್ಷಣ ನೀತಿಯಲ್ಲಿ ಕ್ರೀಡೆಯನ್ನು ಪಠ್ಯಕ್ರಮದಲ್ಲಿ ಸೇರಿಸಲಾಗಿದ್ದು, ಕ್ರೀಡೆ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ಲಭಿಸಲಿದೆ ಎಂದು ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಹೇಳಿದರು.
ಗುರುವಾರ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಮಂಗಳೂರು ವಿವಿ ಮತ್ತು ಪೂರ್ಣಪ್ರಜ್ಞ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಆಶ್ರಯದಲ್ಲಿ ಅಖಿಲ ಭಾರತ ಅಂತರ್ ವಿವಿ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಖೇಲೋ ಇಂಡಿಯಾ ಪ್ರಧಾನಿಯವರ ಕನಸಿನ ಯೋಜನೆಯಾಗಿದ್ದು, ಸ್ಪೋರ್ಟ್ಸ್ ಫಾರ್ ಆಲ್ ಎಂಬುದು ಮುಖ್ಯ ಧ್ಯೇಯವಾಗಿದೆ. ಇದರ ಪರಿಣಾಮವಾಗಿ ಭಾರತ ಮೊದಲ ಬಾರಿಗೆ ಟೆಕಿಯೋ ಒಲಂಪಿಕ್ಸ್‌ನಲ್ಲಿ 7 ಪದಕ ಗಳಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಅಮೃತ ಕ್ರೀಡಾ ಯೋಜನೆ ಜಾರಿಗೊಳಿಸಿದೆ ಎಂದು ಹೇಳಿದರು.
ದಿವ್ಯಾಂಗ ಸ್ಪೋರ್ಟ್ಸ್ ಸೆಂಟರ್
ದಿವ್ಯಾಂಗ ಜನರೂ ಕ್ರೀಡೆಯಲ್ಲಿ ಉತ್ಕೃಷ್ಟ ಪ್ರದರ್ಶನ ನೀಡಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದೇಶದ 5 ಕಡೆಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸ್ಪೋರ್ಟ್ಸ್ ಸೆಂಟರ್ ನಿರ್ಮಿಸುತ್ತಿದೆ. ಗ್ವಾಲಿಯರ್ ಸೆಂಟರ್ ಶೀಘ್ರದಲ್ಲಿ ಕಾರ್ಯಾರಂಭ ಮಾಡಲಿದೆ ಎಂದರು.
ಅದಮಾರು ಮಠ ಶಿಕ್ಷಣ ಕೌನ್ಸಿಲ್ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಜಂಟಿ ಕಾರ್ಯದರ್ಶಿ ಡಾ. ಬಲ್ವಿತ್ ಸಿಂಗ್, ಪೂರ್ಣಪ್ರಜ್ಞಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಜಿ.ಎಸ್. ಚಂದ್ರಶೇಖರ್, ಆಡಳಿತಾಧಿಕಾರಿ ಡಾ.ಎ.ಪಿ. ಭಟ್, ಕಾರ್ಯದರ್ಶಿ ಸಿಎ ಪ್ರಶಾಂತ್ ಹೊಳ್ಳ, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ, ಪಿಪಿಸಿ ಉಡುಪಿ ಪ್ರಾಂಶುಪಾಲ ಡಾ.ರಾಘವೇಂದ್ರ ಎ, ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಸುಕುಮಾರ್ ಉಪಸ್ಥಿತರಿದ್ದರು.