

ಮಂಡ್ಯ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲಾದ್ಯಂತ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಎಂ.ಆನಂದ ತಿಳಿಸಿದ್ದಾರೆ.
ಜಿಲ್ಲೆಯ 7 ತಾಲೂಕಿನಲ್ಲಿಯೂ ಅದಾಲತ್ ಮುಖಾಂತರ ಪ್ರಕರಣ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಬೈಠಕ್ ನಡೆಸಲಾಗುತ್ತಿದೆ. ಆಸ್ತಿ ವಿವಾದ ಒಳಗೊಂಡಂತೆ ಸಿವಿಲ್ ವ್ಯಾಜ್ಯ, ಹಣವಸೂಲಾತಿ ದಾವೆ, ನಿರ್ದಿಷ್ಟ ಪರಿಹಾರ ಕಾಯ್ದೆಯಡಿ ದಾಖಲಿಸಿರುವ ದಾವೆ, ಮೋಟಾರು ವಾಹನ ಪ್ರಕರಣ, ಎಂಎಂಆರ್‌ಡಿ ಪ್ರಕರಣ, ಜೀವನಾಂಶ ಪ್ರಕರಣ, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣ, ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣ ಮತ್ತು ಚೆಕ್‌ಬೌನ್ಸ್ ಪ್ರಕರಣವನ್ನು ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ರಚಿಸಿ ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಜತೆಗೆ ದಾಖಲಾಗುವ ಮುನ್ನ ಅಂದರೆ, ವ್ಯಾಜ್ಯಪೂರ್ವ ಪ್ರಕರಣ(ಬ್ಯಾಂಕ್ ವಸೂಲಾತಿ, ವಿದ್ಯುತ್ ಹಾಗೂ ನೀರಿನ ಶುಲ್ಕ, ಕಾರ್ಮಿಕ ವಿವಾದ)ವನ್ನು ಉಭಯ ಪಕ್ಷಗಾರರಿಗೆ ನೋಟಿಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠಕ್ ನಡೆಸಿ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ಖುದ್ದಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣವನ್ನು ರಾಜಿ ಮಾಡಿಕೊಳ್ಳಬಹುದಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಈ ಬಾರಿಯ ಲೋಕ ಅದಾಲತ್‌ನಲ್ಲಿ ಕಕ್ಷಿದಾರರು ಹೆಚ್ಚಿನ ಪ್ರಕರಣವನ್ನು ಇತ್ಯರ್ಥಪಡಿಸಿ ಕಕ್ಷಿದಾರರಿಗೆ ಅನುಕೂಲವಾಗುವ ರೀತಿಯಲ್ಲಿ ನ್ಯಾಯದಾನ ಮಾಡಬೇಕೆಂಬ ಇಚ್ಛೆಯಿಂದ ಈ ಮೇಲಿನ ಎಲ್ಲ ಪ್ರಕರಣ ತೆಗೆದುಕೊಳ್ಳಲಾಗಿದೆ. ಜನ ಸಾಮಾನ್ಯರು ಹಾಗೂ ಕಕ್ಷಿದಾರರು ಇದರ ಸದುಪಯೋಗವನ್ನು ಪಡೆದುಕೊಂಡು ತಮ್ಮ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಲೋಕ ಅದಾಲತ್ ಅನ್ನು ಯಶಸ್ವಿಗೊಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.