

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ನೀಡುವ ಟಿ. ವಿಮಲಾ ವಿ. ಪೈ ಪ್ರಾಯೋಜಿತ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ನಾಡೋಜ ಪ್ರೊ. ಹಂ.ಪ ನಾಗರಾಜಯ್ಯ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 1 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಮಾ. 23 ರಂದು ಗೋವಿಂದ ಪೈ ಸಂಶೋಧನ ಸಂಪುಟದ ದ್ವೀತಿಯ ಭಾಗದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತೀಜಿವನ ಆರಂಭಿಸಿದ ಹಂಪನಾ ಮಂಡ್ಯ, ದಾವಣಗೆರೆ, ಶಿವಮೊಗ್ಗ, ಬೆಂಗಳೂರು ಸರ್ಕಾರಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸಿದರು. ಬೆಂಗಳೂರು ವಿಶ್ವವಿದ್ಯಾನಿಲಯ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾಗಿ, ನಿರ್ದೇಶಕರಾಗಿ, ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟಿನ ಸದಸ್ಯರಾಗಿ, ಕನ್ನಡ-&ಸಂಸತಿ ಇಲಾಖೆ ಹಾಗೂ ಜೈನ ಸಂಶೋಧನ ಸಂಸ್ಥೆಯ ನಿರ್ದೇಶಕರಾಗಿ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾಗಿ ಅಪಾರ ಸೇವೆಸಲ್ಲಿಸಿದರು. ಇವರು ನೂರಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ರಚಿಸಿದ್ದಾರೆ. ಭಾಷಾವಿಜ್ಞಾನ, ಜನಪದ, ಅನುವಾದ, ಕಾದಂಬರಿ, ಪ್ರಬಂಧ, ಶಿಶುಸಾಹಿತ್ಯ, ಕಾವ್ಯ, ವಿಮರ್ಶೆ, ಜೀವನಚರಿತ್ರೆ ಕ್ಷೇತ್ರಗಳಲ್ಲಿ ಛಾಪು ಮೂಡಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಿಶುಸಾಹಿತ್ಯ ರಾಷ್ಟ್ರೀಯ ಪ್ರಶಸ್ತಿ, ಚಾವುಂಡರಾಯ ಪುರಸ್ಕಾರ, ಕಾವ್ಯಾನಂದ ಪ್ರಶಸ್ತಿ, ಪಂಪಪ್ರಶಸ್ತಿ, ನಾಡೋಜ ಗೌರವ ಡಾಕ್ಟರೇಟ್, ಸೇಡಿಯಾಪು, ಮುಧೋಳದ ರನ್ನಕವಿಗಳಂತಹ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.