ಮತದಾನವೆಂಬ ಸಾರ್ವಭೌಮ ಅಧಿಕಾರ ಚಲಾಯಿಸಿ: ಹಿರಿಯ ಸಿವಿಲ್ ನ್ಯಾಯಾಧೀಶ ಆನಂದ್ ಕರೆ

National Voters Day
Published on

ಮಂಡ್ಯ: ಮತದಾನವೆನ್ನುವುದು ಸಾರ್ವಭೌಮ ಅಧಿಕಾರ. ಅದನ್ನು ಚಲಾಯಿಸಿದಾಗ ಮಾತ್ರ ಸಮಾಜದಲ್ಲಿ ಆಗುವ ತಪ್ಪನ್ನು ಪ್ರಶ್ನಿಸಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ ಹಿರಿಯ ಸಿವಿಲ್ ನ್ಯಾಯಾಧೀಶ ಆನಂದ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ವೃದ್ಧರೂ ಮತದಾನದಲ್ಲಿ ತೋರಿಸುತ್ತಿರುವ ಉತ್ಸಾಹ ಯುವ ಜನತೆಯಲ್ಲಿ ಕಾಣುತ್ತಿಲ್ಲ. ಪರಿಣಾಮ ಶೇ.65ರಿಂದ 70 ರಷ್ಟು ಮಾತ್ರ ಮತ ಚಲಾವಣೆ ಆಗುತ್ತಿದೆ. ದೇಶದಲ್ಲಿ ಶೇ.100ಕ್ಕೆ ನೂರರಷ್ಟು ಮತ ಚಲಾವಣೆ ಆಗದಿರುವುದು ವಿಪರ್ಯಾಸ. ಯುವ ಜನತೆಗೆ ಇಚ್ಛಾಶಕ್ತಿ ಇದ್ದರೆ ಮಾತ್ರ ಮತದಾನದ ಪ್ರಮಾಣವನ್ನು ಶೇ.100ರಷ್ಟು ಆಗುತ್ತದೆ. ಈ ನಿಟ್ಟಿನಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸುವ ಕೆಲಸ ಹೆಚ್ಚಾಗಬೇಕಿದೆ ಎಂದು ಹೇಳಿದರು.

18 ವರ್ಷ ತುಂಬಿದ ಯುವ ಸಮೂಹವನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವುದರ ಜತೆಗೆ ಅವರಿಗೆ ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮತದಾನ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಸಹ ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುತ್ತೇನೆ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಣೆ ಮಾಡಲಾಗುತ್ತಿದೆ ಎಂದರು.

ಜಿಪಂ ಸಿಇಒ ಶೇಖ್ ತನ್ವೀರ್ ಆಸ್ಿ ಮಾತನಾಡಿ, ಕಾನೂನು ವ್ಯವಸ್ಥೆ ಇಲ್ಲದಿದ್ದರೆ ಬಲ ಇರುವವರು ಬಲಹೀನರ ಮೇಲೆ ಅಧಿಪತ್ಯ ಸ್ಥಾಪಿಸುತ್ತಾರೆ. ಆದರೆ ಭಾರತೀಯ ಸಂವಿಧಾನ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಕೊಟ್ಟು ಎಲ್ಲರಿಗೂ ಬಲ ನೀಡಿದೆ. ಮತದಾನ ಮಾಡಿ ಉತ್ತಮ ಸಮಾಜ ನಿರ್ಮಾಣ ಮಾಡಿ. ವ್ಯವಸ್ಥಿತವಾದ ಕಾನೂನು ರೂಪಿಸುವ ಅಧಿಕಾರ ಜನಪ್ರತಿನಿಧಿಗಳು ಇದೆ. ಅದರೆ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ಸಂವಿಧಾನ ನಮಗೆ ನೀಡಿದೆ. ಮತದಾನದ ಮಹತ್ವದ ಬಗ್ಗೆ ತಿಳಿದುಕೊಳ್ಳಿ ಮತ್ತು ನಿಮ್ಮ ಸುತ್ತಮುತ್ತ ಇರುವವರಿಗೂ ತಿಳಿಸಿ ಎಂದು ಕಿವಿಮಾತು ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿ, ದೇಶದಲ್ಲಿ 9ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳಿವೆ. ಈ ಎಲ್ಲ ಕಡೆ ಮತದಾನ ದಿನವನ್ನು ಆಚರಿಸಲಾಗುತ್ತದೆ. ವಿಶ್ವದಲ್ಲೇ ಅತಿ ಹೆಚ್ಚು ವ್ಯವಸ್ಥಿತವಾಗಿ ಚುನಾವಣೆ ನಡೆಯುವುದು ಭಾರತದಲ್ಲಿ ಮಾತ್ರ. ಉತ್ತಮ ನಾಯಕರನ್ನು ಆರಿಸುವಲ್ಲಿ ನಾಗರಿಕರು ಯಶಸ್ವಿಯಾದರೆ ಉತ್ತಮ ದೇಶ ನಿರ್ಮಾಣಕ್ಕೆ ಬುನಾದಿ ಹಾಕಿದಂತೆ. ಯುವ ಜನತೆ ಎಚ್ಚೆತ್ತುಕೊಳ್ಳಬೇಕು. ಮತದಾನ ಮಹತ್ವ ತಿಳಿಸುವ ಕುರಿತು ಯುವ ಜನತೆಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮತದಾನ ದಿನವನ್ನು ಆಚರಿಸಲಾಗುತ್ತಿದೆ. ವಿವಿಧ ಶೈಲಿಯ ಸಂಸ್ಕೃತಿ, ಸಂಪ್ರದಾಯ, ಆಚಾರ ವಿಚಾರ ಇರುವ ಭಾರತದಲ್ಲಿ ಎಲ್ಲರನ್ನು ಪರಿಗಣಿಸಿ ಒಟ್ಟಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನಿರ್ಮಾಣ ಮಾಡಲು ಮತದಾನದಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದರ್, ನಗರಸಭೆ ಆಯುಕ್ತೆ ಪಂಪಶ್ರೀ ಇತರರಿದ್ದರು.

National Voters Day Mandya

ಪ್ರಶಸ್ತಿ ಸ್ವೀಕರಿಸಿದ ಡಿಸಿ ಡಾ.ಕುಮಾರ

ಕಳೆದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನಾವಣಾ ಕೆಲಸವನ್ನು ಪರಿಗಣಿಸಿ ರಾಜ್ಯ ಚುನಾವಣಾ ಆಯೋಗ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಘೋಷಿಸಲಾಗಿತ್ತು. ಶನಿವಾರ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಪ್ರಶಸ್ತಿ ಪ್ರದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net