ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನ

12
Published on

ಮೈಸೂರು: ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜನವರಿ 25 ರಂದು ಬೆಳಗ್ಗೆ 10 ಗಂಟೆಗೆ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಕೆ.ಎಂ.ಗಾಯತ್ರಿ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ದೇವರಾಜ ಅರಸು ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಸ್ವೀಪ್ ಸಮಿತಿಯ ಮತದಾರರ ದಿನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಇರುವುದರಿಂದ ಈ ಬಾರಿಯ ಮತದಾರರ ದಿನ ವಿಶೇಷವಾಗಿರಲಿದೆ. ದಿನಾಚರಣೆ ಅರ್ಥಪೂರ್ಣವಾಗಿ, ಯುವ ಮತದಾರರಲ್ಲಿ ಮತದಾನದ ಬಗೆಗೆ ಹುಮ್ಮಸ್ಸು ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಗುತ್ತದೆ.

‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’ ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ನಡೆಲಿದೆ. ಜಿಲ್ಲಾ ನ್ಯಾಯಾಧೀಶರು, ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾ ರಾಯಭಾರಿಗಳಾದ ಜಾವಗಲ್ ಶ್ರೀನಾಥ್, ಪೊಲೀಸ್ ಆಯುಕ್ತರು ಹಾಗೂ ಚುನಾವಣಾ ಐಕಾನ್‌ಗಳನ್ನು ಆಹ್ವಾನಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಮತದಾನದ ಜಾಗೃತಿಯ ಬಗೆಗೆ ವಿವಿಧ ಸ್ಪರ್ಧೆಗಳನ್ನು ಆಡಿಸುವ ಜತೆಗೆ ವಿಜೇತರಾದ ವಿದ್ಯಾರ್ಥಿಗಳು ಹಾಗೂ ನವ ಮತದಾರರಿಗೆ ಬಹುಮಾನ ವಿತರಿಸಲಾಗುವುದು . ಶಾಲಾ ಹಂತ,ಮತಗಟ್ಟೆ ವ್ಯಾಪ್ತಿ ಹಾಗೂ ತಾಲೂಕು ಹಂತದಲ್ಲಿಯೂ ಕಾರ್ಯಕ್ರಮಗಳು ನಡೆಯಬೇಕು. ಹಿರಿಯ ನಾಗರೀಕರು, ವಿಶೇಷ ಚೇತನರು, ದುರ್ಬಲ ವರ್ಗದವರು, ತೃತೀಯ ಲಿಂಗಿಗಳು ಹೆಚ್ಚು ಮತದಾನ ಮಾಡುವಂತೆ ಪ್ರೇರೇಪಿಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಎನ್‌ಸಿಸಿ, ಎನ್‌ಎಸ್‌ಎಸ್, ವೈದ್ಯಕೀಯ ಕಾಲೇಜು, ಇಂಜನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್, ಚುನಾವಣಾ ಸಾಕ್ಷರತಾ ಕ್ಲಬ್‌ಗಳ ಸದಸ್ಯರು, ಪ್ಯಾರಾಮೆಡಿಕಲ್ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡು ಕಾರ್ಯಕ್ರಮ ಯಶಸುಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಪ್ರಮುಖ ವೃತ್ತಗಳಲ್ಲಿ ಬ್ಯಾನರ್, ಪೋಸ್ಟರ್ಸ್‌ಗಳ ಮೂಲಕ ಹೆಚ್ಚು ಪ್ರಚಾರ ನೀಡುವುದರೊಂದಿಗೆ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದರು. ಪಾಲಿಕೆ ಆಯುಕ್ತ ಅಶಾದ್ ಉರ್ ರೆಹಮಾನ್ ಷರಿಫ್, ಉಪ ಆಯುಕ್ತ ಸೋಮಶೇಖರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net