ಜ.25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

National Voter's Day pre-meeting mandya
Published on

ಮಂಡ್ಯ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಜ.25ರಂದು ನಗರದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಪಂ ಕಚೇರಿಯಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. 18 ವರ್ಷ ತುಂಬಿದವರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಉತ್ತೇಜಿಸುವುದು, ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡುವುದರ ಬಗ್ಗೆ ಜಾಗೃತಿ ಮೂಡಿಸುವುದು ಆಚರಣೆಯ ಮೂಲ ಉದ್ದೇಶವಾಗಿದೆ ಎಂದರು.

ಯುವ ಮತದಾರರನ್ನು ಕೇಂದ್ರೀಕೃತವಾಗಿಟ್ಟುಕೊಂಡು ಮತದಾನ ಪ್ರಕ್ರಿಯೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು. ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಅಂದು ಬಹುಮಾನ ವಿತರಿಸಲಾಗುವುದು. ಜಿಲ್ಲೆಯ ಯುವ ಮತದಾರರನ್ನು ಗುರುತಿಸಿ ನೋಂದಣಿ ಮಾಡಿಸಲು ಕ್ರಮ ವಹಿಸಿ. ಈಗಾಗಲೇ ನೋಂದಣಿ ಮಾಡಿಕೊಂಡಿರುವ ಯುವ ಮತದಾರರಿಗೆ ಚುನಾವಣಾ ಗುರುತಿನ ಚೀಟಿಯನ್ನು ತಲುಪಿಸಿ ಎಂದು ಸೂಚನೆ ನೀಡಿದರು.

ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಮತದಾರರು ತಮ್ಮ ಬಳಿ ಚುನಾವಣಾ ಗುರುತಿನ ಚೀಟಿ ಇದ್ದರೂ, ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಡಿಡಿಪಿಯು ಚೆಲುವಯ್ಯ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ಚುನಾವಣಾ ತಹಸೀಲ್ದಾರ್ ಬಿ.ಎಸ್.ವೆಂಕಟಚಲಪತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net