ವಿಜಯವಾಣಿ ಸುದ್ದಿಜಾಲ ಶಿಡ್ಲಘಟ್ಟ
ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್-, ಬಿಜೆಪಿ ಮೈತ್ರಿಯಲ್ಲಿ ಚುನಾವಣೆ ಎದುರಿಸಿದರೆ ರಾಜ್ಯದಲ್ಲಿ ಎನ್ಡಿಎ ಅಧಿಕಾರಕ್ಕೆ ಬರುವುದು ಖಚಿತ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ಶಾಸಕ
ಬಿ.ಎನ್.ರವಿಕುಮಾರ್ ತಿಳಿಸಿದರು.
ಗೃಹ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಜನರಿಗೆ ಘೋಷಿಸಿದ ಗ್ಯಾರಂಟಿ ಯೋಜನೆಗಳಿಂದ ಅಧಿಕಾರಕ್ಕೆ ಬರಲಿಲ್ಲ, ಬದಲಿಗೆ ಅದಕ್ಕೂ ಮುನ್ನ ಮೂರೂವರೆ ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಕೆಲ ತಪು$್ಪ ನಿರ್ಧಾರಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾಯಿತು ಎಂದರು.
ಕಾಂಗ್ರೆಸ್ಗೆ ಮತದಾರರು 136 ಸ್ಥಾನಗಳನ್ನು ಕೊಟ್ಟರು. ಆದರೆ ಒಂದೂವರೆ ವರ್ಷದ ನಂತರ ನಡೆದ ಸಂಸತ್ ಚುನಾವಣೆಯಲ್ಲಿ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ-, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿದ್ದ 143 ಕ್ಷೇತ್ರಗಳಲ್ಲಿ ಮುನ್ನಡೆ ಸಿಕ್ಕಿತು ಎಂದರೆ ಇದರರ್ಥ ಏನು? ಹಾಗಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಅಧಿಕಾರಕ್ಕೆ ಬರಲಿದ್ದು ಎಚ್ಡಿಕೆ 3ನೇ ಬಾರಿ ಮುಖ್ಯಮಂತ್ರಿ ಆಗುವುದು ಖಚಿತ ಎಂದು ನುಡಿದರು.
ಸಿಎಂರಿಂದ ಶಂಕುಸ್ಥಾಪನೆ
ನ.24 ರಂದು ಸಿಎಂ ಸಿದ್ದರಾಮಯ್ಯ ಶಿಡ್ಲಘಟ್ಟಕ್ಕೆ ಆಗಮಿಸಲಿದ್ದು, ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ, ರಾಮಸಮುದ್ರ ಕೆರೆಯಿಂದ ಶಿಡ್ಲಘಟ್ಟ ನಗರಕ್ಕೆ ಕುಡಿಯುವ ನೀರು ಸರಬರಾಜು, ಒಳ ಚರಂಡಿ ಹಂತ 2ರ ಯೋಜನೆ ಸೇರಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ, ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಶಾಸಕರು ತಿಳಿಸಿದರು. 22 ಕೋಟಿ ವೆಚ್ಚದ ರಸ್ತೆ ಕಾಮಗಾರಿ, ಉತ್ತರ ವಿಶ್ವವಿದ್ಯಾಲಯದ 2ನೇ ಹಂತದ ಕಾಮಗಾರಿಗೆ 95 ಕೋಟಿ ರೂ. ಕಾಮಗಾರಿಗೆ ಭೂಮಿ ಪೂಜೆ ನಡೆಯಲಿದೆ ಎಂದರು. ನ.8ರಂದು ಸಿಎಂ ಕಾರ್ಯಕ್ರಮ ನಿಗದಿಯಾಗಿತ್ತಾದರೂ ಕನಕ ಜಯಂತಿ ಕಾರಣ ಶಿಡ್ಲಘಟ್ಟ ಕಾರ್ಯಕ್ರಮ ಮುಂದೂಡಿದ್ದು ನ.24ರಂದು ನಿಗದಿಪಡಿಸಲಾಗುವುದು ಎಂದು ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ಕ್ಷೇತ್ರದಲ್ಲಿನ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಬಳಿ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ತಿಳಿಸಲಿದ್ದೇವೆ. ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿಕೊಳ್ಳುತ್ತೇವೆ ಎಂದರು.
ಜೆಡಿಎಸ್ಗೆ ಶಕ್ತಿ
ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದು ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದು, ಪಕ್ಷಕ್ಕೆ ಶಕ್ತಿಬಂದಂತಾಗಿದೆ ಎಂದರು.