

ಮದ್ದೂರು: ಗ್ರಾಮಾಂತರ ಪ್ರದೇಶಗಳ ರಸ್ತೆಗಳ ಅಭಿವೃದ್ಧಿ ಹಾಗೂ ಮೂಲ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಹೂತಗೆರೆ ಹಾಗೂ ಹುಳಗನಹಳ್ಳಿಯಲ್ಲಿ ಸಿಸಿ ಚರಂಡಿ ಮತ್ತು ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ನಾನು ಶಾಸಕನಾದ ನಂತರ ಗ್ರಾಮಾಂತರ ಪ್ರದೇಶಗಳ ಸಾಕಷ್ಟು ರಸ್ತೆಗಳು ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಿದ್ದೇನೆ. ಹಳ್ಳಿಗಳು ಉದ್ಧಾರವಾದರೆ ಮಾತ್ರ ದೇಶ ಅಭಿವೃದ್ಧಿ ಎಂಬುದನ್ನು ಮನಗಂಡು ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಅನುದಾನ ತಂದು ಸಮಗ್ರ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.
ತಾಲೂಕಿನ ಎಲ್ಲ ಕೆರೆಗಳಿಗೆ ಏತಾ ನೀರಾವರಿ ಯೋಜನೆ ಮೂಲಕ ನೀರು ತುಂಬಿಸುವ ಕೆಲಸ ಮಾಡಲಾಗಿದೆ. ಬಹುತೇಕ ಎಲ್ಲ ಕೆರೆಗಳಿಗೆ ನೀರು ತುಂಬಿಸಲಾಗಿದೆ. ಮುಂದಿನ ದಿನಗಳಲ್ಲಿ ಏತಾ ನೀರಾವರಿ ಯೋಜನೆಗೆ ಆಧುನಿಕ ಸ್ಪರ್ಶ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದರು.
ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸುಮಾರು 1500 ಕೋಟಿ ರೂ.ಗೂ ಅಧಿಕ ಅನುದಾನ ನೀಡಿದೆ. ಇದರಿಂದ ನೀರಾವರಿ, ರಸ್ತೆಗಳು, ಚರಂಡಿಗಳು, ಶಾಲಾ, ಕಾಲೇಜುಗಳು ಕೊಠಡಿಗಳು ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ಸರ್ವತೋಮುಖ ಅಭಿವೃದ್ಧಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿಶೇಷ ಅನುದಾನ ತಂದು ತಾಲೂಕಿನಲ್ಲಿ ಅಭಿವೃದ್ಧಿ ಕ್ರಾಂತಿ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮುಖಂಡರಾದ ಧರ್ಮರಾಜ್, ನಂದೀಶ್, ಚನ್ನಕೇಶವ, ಚೇತನ್, ಶಂಕರ್, ಲಿಂಗರಾಜು, ಕೃಷ್ಣ, ಮಹೇಶ್, ಶಿವಲಿಂಗಯ್ಯ ಸೇರಿದಂತೆ ಇತರರು ಇದ್ದರು.