ನೀಟ್ ಪರೀಕ್ಷೆ ಅಕ್ರಮ ನಿಷ್ಪಕ್ಷಪಾತ ತನಿಖೆಗೆ ಒತ್ತಾಯ

21 ckm 7
ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಎನ್‌ಎಸ್‌ಯುಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದ ಕುರಿತು ಉನ್ನತ ಮಟ್ಟದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
Published on

ಚಿಕ್ಕಮಗಳೂರು: ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದ ಕುರಿತು ಉನ್ನತ ಮಟ್ಟದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ನಗರಲ್ಲಿ ಶುಕ್ರವಾರ ಭಾರಿ ಪ್ರತಿಭಟನೆ ನಡೆಸಿದರು.

ನಗರದ ಹನುಮಂತಪ್ಪ ವೃತ್ತದಿಂದ ಎಸ್‌ಟಿಜೆ, ಟಿಎಂಎಸ್, ಎಂಇಎಸ್ ಸೇರಿದಂತೆ ಇತರೆ ಕಾಲೇಜಿನ ವಿದ್ಯಾರ್ಥಿಗಳು ಎಂ.ಜಿ.ರಸ್ತೆ ಮುಖಾಂತರ ಪ್ರತಿಭಟನಾ ಮೆರವಣಿಗೆ ನಡೆಸಿ ಆಜಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡು ಪ್ರಕರಣಕ್ಕೆ ಸಂಬAಧಿಸಿದAತೆ ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಜಿಲ್ಲಾ ವಕ್ತಾರ ಎಂ.ಸಿ.ಶಿವಾನAದಸ್ವಾಮಿ ಮಾತನಾಡಿ, ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದೆ. ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣಗಳಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಕೇಂದ್ರ ಸರ್ಕಾರ ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂಬುದು ದೇಶಾದ್ಯಂತವಿರುವ ವಿದ್ಯಾರ್ಥಿಗಳು ಕೂಗಾಗಿದೆ. ನೀಟ್ ಫಲಿತಾಂಶದ ವಿವಾದವಾಗಲು ಅನೇಕ ಅಂಶಗಳು ಕಾರಣವಾಗಿದೆ ಎಂದು ದೂರಿದರು.
ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಆದಿಲ್ ಮಾತನಾಡಿ, ೬೭ವಿದ್ಯಾರ್ಥಿಗಳು ಮೊದಲ ರ‍್ಯಾಂಕ್ ಬಂದಿರುವುದು ಹಾಗೂ ಒಂದೇ ಪರೀಕ್ಷಾ ಕೇಂದ್ರದ ೮ ವಿದ್ಯಾರ್ಥಿಗಳು ಪ್ರಥಮ ರ‍್ಯಾಂಕ್ ಮಾಡಿರುವುದು ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಾಗಿದೆ. ಅಲ್ಲದೇ ರ‍್ಯಾಂಕ್ ಗಳಿಸಿರುವ ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರವರಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ ಎಂದರು.
ತರಾತುರಿ ಕೃಪಾಂಕ ನೀಡಿರುವುದು, ಲೋಕಸಭಾ ಚುನಾವಣಾ ಫಲಿತಾಂಶ ದಿನದಂದು ನೀಟ್ ಫಲಿತಾಂಶ ಪ್ರಕಟಿಸಿರುವುದು ಅನುಮಾನಗಳನ್ನು ಹೆಚ್ಚಿಸಿದೆ. ನೀಟ್ ಪರೀಕ್ಷೆ ಫಲಿತಾಂಶ ಹಿನ್ನೆಲೆಯಲ್ಲಿ ದೇಶದ ಕೆಲವೆಡೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಯುವ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳುವ ನಿರ್ಧಾರ ಕೈಬಿಟ್ಟು ನ್ಯಾಯಯುತ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.
ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಬಿ.ಟಿ.ಸುಮಂತ್, ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂಬುದು ಇಡೀ ದೇಶದ ವೈದ್ಯಕೀಯ ಸೀಟು ಆಕಾಂಕ್ಷಿಗಳು, ಪಾಲಕರು ಹಾಗೂ ವಿದ್ಯಾರ್ಥಿಗಳ ಆಗ್ರಹವಾಗಿದೆ ಎಂದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಸುಧೀರ್‌ಕುಮಾರ್ ಮುರೊಳ್ಳಿ, ಎನ್‌ಎಸ್‌ಯುಐ ಮಾಜಿ ಅಧ್ಯಕ್ಷರಾದ ಧೃವಕುಮಾರ್, ವೆಂಕಟೇಶ್, ಕಾರ್ಯದರ್ಶಿಗಳಾದ ಸುನೀಲ್, ವಿನಯ್, ಸಹ ಕಾರ್ಯದರ್ಶಿ ಯೋಗೀಶ್, ಸದಸ್ಯರಾದ ಚೇತನ್, ಪ್ರೀತಮ್‌ಗೌಡ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net