

ಚಿಕ್ಕಮಗಳೂರು: ಆಧುನಿಕ ಕಾಲದಲ್ಲಿ ಮಕ್ಕಳು ಹೆತ್ತವರ ಪೋಷಣೆಗೆ ಗಮನಹರಿಸುತ್ತಿಲ್ಲ. ವಿದ್ಯಾವಂತ ಹಾಗೂ ಉನ್ನತ ಹುದ್ದೆಯಲ್ಲಿರುವವರೇ ಪಾಲಕರನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿರುವುದು ದುರ್ದೈವದ ಸಂಗತಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೇಸರ ವ್ಯಕ್ತಪಡಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಪಂ, ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಹಿರಿಯರನ್ನು ಕಡೆಗಣಿಸುವುದು ಬದಲಾಗದೆ ಇದ್ದಲ್ಲಿ ಕುಟುಂಬ ಸಂಬಂಧವೇ ಕಳೆದುಹೋಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಪಾಲಕರನ್ನು ವೃದ್ಧಾಶ್ರಮದಲ್ಲಿ ಬಿಡುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಕೇಂದ್ರ ಸರ್ಕಾರ ಹಿರಿಯ ನಾಗರಿಕ ಕಾಯ್ದೆ ಜಾರಿಗೆ ತಂದು ಗುರುತಿನ ಚೀಟಿ, ಸಹಾಯವಾಣಿ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ಹಗಲು ಯೋಗಕ್ಷೇಮ ಕೇಂದ್ರಗಳನ್ನು ಸ್ಥಾಪಿಸಿ ಅನುಕೂಲ ಕಲ್ಪಿಸಿದೆ ಎಂದರು.
ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ನಮಗೂ ವಯಸ್ಸಾಗಲಿದೆ ಎಂಬುದನ್ನು ಎಲ್ಲರೂ ಅರಿಯಬೇಕು. ಹಿರಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಬದಲು ಸಕುಟುಂಬವಾಗಿ ಜೀವನ ಸಾಗಿಸಿದರೆ ಮಾತ್ರ ಉತ್ತಮ ಮಕ್ಕಳೆನಿಸಿಕೊಳ್ಳಲು ಸಾಧ್ಯ ಎಂದರು.
ಕ್ರೀಡಾಸ್ಪರ್ಧೆಯಲ್ಲಿ ಗೆದ್ದ ಹಿರಿಯ 90 ಮಂದಿಗೆ ಬಹುಮಾನ ವಿತರಿಸಲಾಯಿತು. ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡಿದ್ದ 80ಕ್ಕೂ ಹೆಚ್ಚು ವರ್ಷದವರಲ್ಲಿ ಸಾಂಕೇತಿಕವಾಗಿ ನಾಲ್ಕು ಮಂದಿಗೆ ಭಾರತೀಯ ಚುನಾವಣಾ ಆಯೋಗದ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಉಪಾಧ್ಯಕ್ಷ ಅಮೃತೇಶ್ ಚೆನ್ನಕೇಶವ, ಸದಸ್ಯರಾದ ಲಕ್ಷ್ಮಣ್, ಅನುಮಧುಕರ್, ವಿಕಲಚೇತನ ಕಲ್ಯಾಣಾಧಿಕಾರಿ ಪೃಥ್ವಿಜಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಸ್.ರಾಜಾನಾಯ್ಕ, ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ಉಪಾಧ್ಯಕ್ಷ ಶಿವಣ್ಣ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಹರೀಶ್, ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ನಂಜುಂಡರಾವ್, ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಪ್ರಕಾಶ್ ಇತರರಿದ್ದರು.