

ಯಳಂದೂರು: ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷೃ ಧೋರಣೆ ತೋರಬಾರದು. ಈ ಬಗ್ಗೆ ದೂರು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಎಚ್ಚರಿಕೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ (ಕೆಡಿಪಿ) ತ್ರೈಮಾಸಿಕ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಅಂಬೇಡ್ಕರ್, ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಕೆಲವಡೆ ಬೋರ್‌ವೆಲ್‌ಗಳನ್ನು ಕೊರೆಸಲಾಗಿದೆ. ಆದರೆ ಇದಕ್ಕೆ ಇನ್ನೂ ವಿದ್ಯುತ್ ಸಂಪರ್ಕ ಕೊಟ್ಟಿಲ್ಲ. ಕೆಲ ಫಲಾನುಭವಿಗಳು ಇದಕ್ಕೆ ಆಯ್ಕೆಯಾಗಿದ್ದರೂ ಅವರಿಗೆ ಇನ್ನೂ ಸೌಲಭ್ಯ ನೀಡಿಲ್ಲ. ಆದರೂ ಕೂಡ ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರುವುದು ಸಮಂಜಸವಲ್ಲ. ಕೂಡಲೇ ಅರ್ಹರಿಗೆ ಯೋಜನೆಯ ಸೌಲಭ್ಯ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಾಮಾಜಿಕ ಅರಣ್ಯ ವಲಯ ವತಿಯಿಂದ ಗಿಡ ನೆಡಲಾಗುತ್ತಿದ್ದು, ಪೋಷಣೆ ಆಗುತ್ತಿಲ್ಲ. ಈ ಬಗ್ಗೆ ಇಲಾಖೆ ಎಚ್ಚರ ವಹಿಸಬೇಕು. ಮುಖ್ಯವಾಗಿ ಕೆರೆ, ರಸ್ತೆ ಬದಿಗಳಲ್ಲಿ ನೆಟ್ಟಿರುವ ಗಿಡಗಳ ಸಂರಕ್ಷಣೆ ಮಾಡಬೇಕು ಎಂದು ಸಲಹೆ ನೀಡಿದರು.
ಬಿಳಿಗಿರಿರಂಗನಬೆಟ್ಟದ ಪುರಾಣಿ ಪೋಡಿನಲ್ಲಿ ಮೂಲ ಸೌಲಭ್ಯಗಳ ಕೊರತೆ ಇದೆ. ಅರಣ್ಯ ಇಲಾಖೆ ಇದರ ಬಗ್ಗೆ ನಿರ್ಲಕ್ಷೃ ತೋರುತ್ತಿದೆ ಎಂಬ ದೂರು ಇದೆ. ಇದು ನಿಲ್ಲಬೇಕು. ಇಲ್ಲಿಗೆ ಮೂಲ ಸೌಲಭ್ಯ ನೀಡಲು ಸಂಬಂಧಪಟ್ಟ ಉನ್ನತ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ಕ್ರಮ ವಹಿಸಲಾಗುವುದು ಎಂದರು.
ವಿದ್ಯಾರ್ಥಿ ನಿಲಯಗಳಿಗೆ ಖುದ್ದು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕು. ವಿದ್ಯಾರ್ಥಿಗಳಿಗೆ ಸರಿಯಾಗಿ ಊಟ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕು. ಅಲ್ಲದೆ ಕೆಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕಿದ್ದು, ಇದನ್ನು ಕೊಡಿಸಲು ಕ್ರಮ ವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿ ಇಲಾಖೆ ಅಧಿಕಾರಿ ಕಡ್ಡಾಯವಾಗಿ ಇಂತಹ ಸಭೆಗಳಲ್ಲಿ ಭಾಗವಹಿಸಿ ತಮ್ಮ ಇಲಾಖೆಯ ಪ್ರಗತಿ ಪರಿಶೀಲನಾ ವರದಿ ನೀಡಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಂದಾಯ, ಅಬಕಾರಿ, ಸೆಸ್ಕ್, ಪಂಚಾಯತ್ ರಾಜ್, ನೀರಾವರಿ, ಪೊಲೀಸ್, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ತಮ್ಮ ಇಲಾಖಾ ವ್ಯಾಪ್ತಿಯಲ್ಲಿನ ಮಾಹಿತಿ ಪಡೆದು, ಸೌಲಭ್ಯ ಒದಗಿಸುವಂತೆ ಸಲಹೆ ನೀಡಿದರು.
ತಹಸೀಲ್ದಾರ್ ಜಯಪ್ರಕಾಶ್ ಇಒ ಉಮೇಶ್, ಪಪಂ ಮುಖ್ಯಾಧಿಕಾರಿ ಮಹೇಶ್‌ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.