ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ

4 arkera 1
ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಮಗುವಿನ ಪಾಲಕರಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಐದು ಲಕ್ಷ ರೂ. ಚೆಕ್ ಅನ್ನು ಭಾನುವಾರ ನೀಡಿದರು. ಶಾಸಕಿ ಕರೆಮ್ಮ ಜಿ.ನಾಯಕ ಇದ್ದರು.
Published on

ಅರಕೇರಾ: ಕಲುಷಿತ ನೀರು ಪೂರೈಕೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಮಸ್ಯೆ ನಿರ್ವಹಣೆ ಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಹೇಳಿದರು.

ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ 3ವಷರ್ದ ಮಗುವಿನ ಕುಟುಂಬಕ್ಕೆ ಭಾನುವಾರ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ. ಚೆಕ್ ವಿತರಿಸಿ ಮಾತನಾಡಿದರು. ಮಳೆಗಾಲದಿಂದಾಗಿ ಕುಡಿಯುವ ನೀರಿಗೆ ಕಲುಷಿತ ನೀರು ಸೇರುವ ಸಾಧ್ಯತೆಗಳಿವೆ. ರಾಜ್ಯದ ವಿವಿಧೆಡೆ ಈ ಸಮಸ್ಯೆ ಕಾಣಿಸಿಕೊಂಡಿದೆ.

ಲಿಂಗಸೂಗುರು ತಾಲೂಕಿನ ಗೋರೆಬಾಳದಲ್ಲಿ ವಾಂತಿ, ಭೇದಿ ಪ್ರಕರಣಗಳು ನಿಯಂತ್ರಣಕ್ಕೆ ಬಂದಿವೆ. ಎರಡು ದಿನಗಳಿಂದ ಯಂರಗುಂಟಿ ಗ್ರಾಮದಲ್ಲಿ ಸಹ ಪ್ರಕರಣ ಬೆಳಕಿಗೆ ಬಂದಿದೆ. ಸಿಇಒ, ಡಿಎಚ್‌ಒ ಸೇರಿ ವಿವಿಧ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುವ ಮೂಲಕ ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದರು.

ಇದನ್ನೂ ಓದಿ:ಕಲುಷಿತ ನೀರು ಸೇವನೆ ಘಟನೆ: ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಗ್ರಾಪಂ ಮಟ್ಟದಲ್ಲಿ ಅಧಿಕಾರಿಗಳು, ಅಧ್ಯಕ್ಷರು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು. ಸಮಸ್ಯೆ ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಪಂಚಾಯಿತಿ ಮಟ್ಟದ ಅಧಿಕಾರಿಗಳು ಈ ರೀತಿ ಸಮಸ್ಯೆಗಳು ಕಂಡು ಬಂದಲ್ಲಿ ಕೂಡಲೇ ಸರಿಪಡಿಸಬೇಕು ಎಂದು ಬೋಸರಾಜು ತಾಕೀತು ಮಾಡಿದರು.

ಶಾಸಕರಾದ ಕರೆಮ್ಮ ಜಿ.ನಾಯಕ, ಹಂಪಯ್ಯ ನಾಯಕ, ಜಿಪಂ ಸಿಇಒ ಶಶಿಧರ ಕುರೇರ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಕುಮಾರ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎ.ರಾಜಶೇಖರ ನಾಯಕ, ಜೆಡಿಎಸ್ ತಾಲೂಕು ಅಧ್ಯಕ್ಷ ಬುಡ್ಡನಗೌಡ ಪಾಟೀಲ್, ದೇವದುರ್ಗ ತಹಸೀಲ್ದಾರ್ ವೈ.ಕೆ ಬಿದರಿ, ಅರಕೇರಾ ತಹಸೀಲ್ದಾರ್ ಯಲ್ಲಪ್ಪ ಸುಬೇದಾರ್, ಡಿಎಚ್‌ಒ ಡಾ.ಸುರೇಂದ್ರಬಾಬು, ಇಒ ಪಂಪಾಪತಿ ಹಿರೇಮಠ, ಪಿಐ ಹೊಸಕೇರಪ್ಪ ಕೆ, ಟಿಎಚ್‌ಒ ಡಾ.ಬನದೇಶ್ವರ, ಬಿಇಒ ಸುಖದೇವ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net