ನೇಹಾ ಕೊಲೆ ಪ್ರಕರಣ ಸಿಒಡಿಗೆ: ಸಿಎಂ ಸಿದ್ದರಾಮಯ್ಯ

CM Siddaramaiah speak in airport
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
Published on

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಒಡಿಗೆ ವಹಿಸಿದ್ದು ವಿಶೇಷ ನ್ಯಾಯಾಲಯ ಸ್ಥಾಪಿಸಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆ ತರೀಕೆರೆಗೆ ತೆರಳುವ ಮುನ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕಾಂಗ್ರೆಸ್ ಸರ್ಕಾರ ಕೂಡ ನೇಹಾ ಕುಟುಂಬದ ಪರವಾಗಿದ್ದು ಆರೋಪಿ ವಿರುದ್ಧ ತ್ವರಿತವಾಗಿ ಜಾರ್ಜ್‌ಶೀಟ್ ಸಲ್ಲಿಸಿ ನೇಹಾ ಕುಟುಂಬಕ್ಕೆ ನ್ಯಾಯ ಕೊಡಿಸಲಾಗುವುದು ಎಂದರು.
ನೇಹಾ ತಂದೆ ನಿರಂಜನ್ ಹಿರೇಮಠ ಅವರು ಇನ್ನೂ ನಾಲ್ವರು ಕೃತ್ಯದ ಹಿಂದಿದ್ದಾರೆಂದು ಆರೋಪ ಮಾಡುತ್ತಿದ್ದಾರೆ. ಕೊಲೆ ಮಾಡಿದವರು ಮತ್ತು ಅದಕ್ಕೆ ಸಾಥ್ ನೀಡಿದವರು ಯಾರೇ ಇದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಈಗಾಗಲೇ ಸಚಿವರಾದ ಎಚ್.ಕೆ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ನೇಹಾ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಸರ್ಕಾರ ಕೂಡ ಅವರ ಬೆಂಬಲಕ್ಕೆ ನಿಲ್ಲಲಿದೆ ಎಂದು ಹೇಳಿದರು.

ದಿಂಗಾಲೇಶ್ವರ ಶ್ರೀಗಳಿಗೆ ಮನವಿ ಮಾಡಿದ್ದೆ
ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಶಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು. ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರನ್ನು ಸೋಲಿಸಲು ಸ್ವಾಮೀಜಿ ನಾಮಪತ್ರ ಹಿಂಪಡೆದು ನಮ್ಮ ಅಭ್ಯರ್ಥಿಗೆ ಬೆಂಬಲ ನೀಡುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net