

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ದೇಶದ ಅಭಿವೃದ್ಧಿಗೆ ಪೂರಕವಾದ ಪ್ರಜೆಗಳಾಗಿ ರೂಪಿಸಬೇಕಾದ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ನಗರಸಭೆ ವ್ಯಾಪ್ತಿಯ ವಾಜರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಆವರಣದಲ್ಲಿ ಆಯೋಜಿಸಿದ್ದ ಉಚಿತ ನೋಟ್‌ಬುಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಷ್ಟ್ರವೊಂದರ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಣ ಮಹತ್ವದ ಪಾತ್ರವಹಿಸಲಿದೆ. ಸ್ವಾತಂತ್ರ್ಯ ನಂತರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಿರುವ ಸರ್ಕಾರಗಳು ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀತಿ ಜಾರಿಗೊಳಿಸಿದ್ದು, ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆವಹಿಸುತ್ತಿವೆ ಎಂದ ಅವರು, ಇತ್ತೀಚೆಗೆ ಸರ್ಕಾರಿ ಶಾಲೆಗಳಲ್ಲಿ ಆಂಗ್ಲಭಾಷಾ ಶಿಕ್ಷಣಕ್ಕೂ ಆದ್ಯತೆ ನೀಡುತ್ತಿರುವುದನ್ನು ಪಾಲಕರು ಮನಗಾಣಬೇಕು. ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದೇವೆ ಎಂದು ಕೀಳರಿಮೆ ಬೇಡ ಎಂದರು.
ತಾಲೂಕಿನಾದ್ಯಂತ ಸರ್ಕಾರಿ ಶಾಲೆಗಳಿಗೆ ಕಳೆದ ವರ್ಷದಂತೆ ಈ ವರ್ಷವೂ ಬಡಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿವರ್ಷ ನೋಟ್‌ಬುಕ್ ವಿತರಣೆ ಮಾಡುತ್ತಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದರು.
ನಗರಸಭೆ ಅಧ್ಯಕ್ಷೆ ಲತಾಹೇಮಂತ್‌ಕುಮಾರ್ ಮಾತನಾಡಿ, ತಾಲೂಕಿನಾದ್ಯಂತ ಶಾಸಕರು ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪ್ರಗತಿಗಾಗಿ ಉಚಿತ ನೋಟ್ ಬುಕ್ ವಿತರಣೆ ಮಾಡುತ್ತಿರುವುದು ಸಂತಸದ ಸಂಗತಿ ಎಂದರು.
ನೋಟ್ ಬುಕ್ ವಿತರಣೆ: ತಾಲೂಕಿನಾದ್ಯಂತ 11 ಪ್ರೌಢಶಾಲೆ ಮತ್ತು ಮತ್ತು 280 ಪ್ರಾಥಮಿಕ ಶಾಲೆ ಸೇರಿ 291 ಶಾಲೆಯ 24 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ತಿಮ್ಮಯ್ಯ ಮಾಹಿತಿ ನೀಡಿದರು.
ಪುರಸಭೆ ಮಾಜಿ ಅಧ್ಯಕ್ಷ ಎ.ಪಿಳ್ಳಪ್ಪ, ಎಂ.ನಾರಾಯಣ್‌ಗೌಡ, ನೆ.ಯೋ.ಪ್ರಾಧಿಕಾರ ಮಾಜಿ ಅಧ್ಯಕ್ಷ ಹೇಮಂತ್‌ಕುಮಾರ್, ಬಿಎಂಟಿಸಿ ಮಾಜಿ ನಿರ್ದೇಶಕ ಮಿಲ್ಟ್ರೀಮೂರ್ತಿ, ಬ್ಲಾಕ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸಿ.ಆರ್.ಗೌಡ, ನಗರ ಘಟಕದ ಅಧ್ಯಕ್ಷ ಟಿ.ನಾಗರಾಜು, ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನಮ್ಮ, ಗ್ರಾಪಂ ಅಧ್ಯಕ್ಷ ಹನುಮಂತರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಮುಖಂಡರಾದ ಕುಮಾರ್, ಕೆ.ಕೃಷ್ಣಪ್ಪ, ಚಿಕ್ಕಹನುಮೇಗೌಡ, ಅಂಜನಮೂರ್ತಿ, ನರಸಿಂಹಮೂರ್ತಿ, ವಿಜಯ್‌ಕುಮಾರ್, ಎನ್.ಎಸ್.ಮೂರ್ತಿ, ಬೈಲಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.