

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಲ್ಲಿ ತಾಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳು ವಿಫಲವಾಗಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ಕ್ಷೇತ್ರದ ಶಾಸಕರು ಜನಸಾಮಾನ್ಯರು, ರೈತರ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸಲು ಮುಂದಾಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಇದೇ ನಡೆ ಅನುಸರಿಸುತ್ತಿದ್ದಾರೆ ಎಂದು ದೂರಿದರು.
ರಿಯಲ್ ಎಸ್ಟೇಟ್ ದಂಧೆಕೋರರು ಸರ್ಕಾರಿ ಭೂಮಿ ಕಬಳಿಕೆ ಮಾಡುತ್ತಿದ್ದಾರೆ. ಹೋರಾಟಗಳ ಮೂಲಕ ರೈತರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಸನ್ನಿವೇಶ ಸೃಷ್ಟಿಯಾಗಿದ್ದು, ಸರ್ಕಾರದ ಗಮನ ಸೆಳೆಯುವ ಜತೆಗೆ ಜಿಲ್ಲಾಡಳಿತ, ತಾಲೂಕು ಆಡಳಿತವನ್ನು ಎಚ್ಚರಿಸಲು ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.
ಕೈಗಾರಿಕೆಗಳ ಆರಂಭಕ್ಕೆ ರೈತರ ಜಮೀನು ಸ್ವಾಧೀನ ಪಡಿಸಿಕೊಂಡಿರುವ ಸರ್ಕಾರ, ಕೈಗಾರಿಕೆಗಳಲ್ಲಿ ರೈತರ ಮಕ್ಕಳಿಗೆ ಉದ್ಯೋಗ ನೀಡುತ್ತಿಲ್ಲ ಎಂದ ಅವರು, ವಿದ್ಯುತ್ ಸಮಸ್ಯೆಗೆ ಪರಿಹಾರ ಒದಗಿಸಬೇಕು, ಸರ್ಕಾರಿ ಆಸ್ಪತ್ರೆಗಳನ್ನು ಉನ್ನತೀಕರಿಸಬೇಕು. ಲಕ್ಷಾಂತರ ರೂ. ಬೆಲೆಬಾಳು ಕೃಷಿ ಭೂಮಿ ಮೇಲೆ 50 ಸಾವಿರ ರೂ. ಸಾಲ ನೀಡಲು ಮೀನಮೇಷ ಮಾಡಲಾಗುತ್ತಿದೆ. ಇದು ಸರಿಯಲ್ಲ. ಸಾಮಾನ್ಯ ಜನರು, ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ತಾಲೂಕಿನಾದ್ಯಂತ ಅಕ್ರಮ ಬಡಾವಣೆ ನಿರ್ಮಾಣ, ಗುಂಡುತೋಪು, ಸ್ಮಶಾನ, ಕೆರೆ ಒತ್ತುವರಿ ಸೇರಿ 900 ಕೋಟಿ ರೂ. ಮೌಲ್ಯದ ಆಸ್ತಿಗಳು ಒತ್ತುವರಿಯಾಗಿದೆ. ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ. ಕೆಲ ಅಧಿಕಾರಿಗಳ ಅಕ್ರಮಕ್ಕೆ ಕೈಜೋಡಿದ್ದಾರೆ ಎಂದು ತಾಲೂಕು ಅಧ್ಯಕ್ಷ ರಾಜೇಶ್ ತಿಳಿಸಿದರು.ರೈತರ ಸಂಕಷ್ಟಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸಣ್ಣ ಕೆಲಸಕ್ಕೂ ರೈತರನ್ನು ನಿತ್ಯ ಅಲೆದಾಡಿಸುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರೈತರಿಗೆ ಅನುಕೂಲ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ರೈತ ಮುಖಂಡರಾದ ರವೀಂದ್ರ, ಜಗದೀಶ್, ಸೋಮಶೇಖರ್, ಅತಹಳ್ಳಿ ದೇವರಾಜು, ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮತ್ತಿತರರು ಉಪಸ್ಥಿತರಿದ್ದರು.