

ಯಳಂದೂರು: ಪಟ್ಟಣದಲ್ಲಿರುವ ವೈ.ಎಂ.ಮಲ್ಲಿಕಾರ್ಜುನಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಭರವಸೆ ನೀಡಿದರು.
ವೈ.ಎಂ.ಮಲ್ಲಿಕಾರ್ಜುನಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಿವೃತ್ತ ಶಿಕ್ಷಕ ಮಹದೇವಚಾರ್ ಅವರು 2 ಎಕರೆ ಜಮೀನನ್ನು ದಾನವಾಗಿ ನೀಡಿದ್ದರು. ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ಜಮೀನಿನಲ್ಲಿ ಕಟ್ಟಡ ನಿರ್ಮಿಸಲು ಸಾಧ್ಯವಾಗುವುದಿಲ್ಲ. ಇದು ಹಳ್ಳದಲ್ಲಿದೆ ಎಂಬ ತಜ್ಞರ ವರದಿ ಆಧಾರದ ಮೇಲೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲೇ 30 ಗುಂಟೆ ಜಮೀನನ್ನು ಪದವಿ ಕಾಲೇಜಿಗೆ ಗುರುತಿಸಲಾಗಿದೆ. ಇದು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸೇರಿದ ಆಸ್ತಿಯಾಗಿದೆ. ಹಾಗಾಗಿ ಕೆಲವು ತಾಂತ್ರಿಕ ಸಮಸ್ಯೆಗಳಿದ್ದು, ಇದನ್ನು ನಿವಾರಿಸಿ ಶೀಘ್ರ ಕಟ್ಟಡ ಕಾಮಗಾರಿ ಆರಂಭಿಸಲಾಗುವುದು ಎಂದರು.
ಕ್ಷೇತ್ರಕ್ಕೆ 500 ಕೋಟಿ ರೂ. ಅನುದಾನ: ನಾನು ಶಾಸಕನಾಗಿ ಆಯ್ಕೆಯಾದ ಮೇಲೆ ಕ್ಷೇತ್ರದ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನವನ್ನು ಈವರೆಗೆ ತಂದಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ. ಆರೋಗ್ಯ, ಶಿಕ್ಷಣ, ನೀರಾವರಿ, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಇದನ್ನು ಬಳಕೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ನಾನು ಪಟ್ಟಿ ಬಿಡುಗಡೆ ಮಾಡಲಿದ್ದೇನೆ. ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಪದವಿ ಶಿಕ್ಷಣ ಪಡೆಯುತ್ತಿರುವ ಪರಿಶಿಷ್ಟ ಜಾತಿ, ವರ್ಗಗಳ ಮಕ್ಕಳಿಗೆ 27 ಸಾವಿರ ರೂ. ವಿದ್ಯಾರ್ಥಿ ವೇತನ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ, ಹಿಂದುಳಿದ ವರ್ಗಗಳ ರೈತರ ಮಕ್ಕಳಿಗೆ 6 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಅಲ್ಲದೆ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಿಂದ 30 ಸಾವಿರ ರೂ. ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅವಕಾಶವಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಜತೆಗೆ ಪಾಲಕರು, ಹಿರಿಯರನ್ನು ಗೌರವಿಸುವ ಸಂಸ್ಕೃತಿ ಕಲಿಯಬೇಕು ಎಂದರು.
ರಾಜಸ್ವ ನಿರೀಕ್ಷಕ ಎಂ.ಎಸ್.ಯದುಗಿರಿ ಮುಖ್ಯ ಭಾಷಣ ಮಾಡಿದರು. ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್, ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಕಿನಹಳ್ಳಿ ಪ್ರಭುಪ್ರಸಾದ್, ಪಪಂ ಸದಸ್ಯ ಮಹೇಶ್, ಪ್ರಾಂಶುಪಾಲ ವಿಜಯಾ ಮಾತನಾಡಿದರು. ಪಪಂ ಮುಖ್ಯಾಧಿಕಾರಿ ಎಂ.ಪಿ.ಮಹೇಶ್‌ಕುಮಾರ್, ಬಿಳಿಗಿರಿರಂಗನಾಥಸ್ವಾಮಿ ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜೆ.ಶ್ರೀನಿವಾಸ್, ಪಪಂ ನಾಮನಿರ್ದೇಶಿತ ಸದಸ್ಯರಾದ ಲಿಂಗರಾಜಮೂರ್ತಿ, ಶ್ರೀಕಂಠಸ್ವಾಮಿ, ಜೆಎಸ್‌ಎಸ್ ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್, ಅಂಬಳೆ ವೀರಭದ್ರನಾಯಕ, ಕೆ ಶ್ವೇತಾ, ಮನೋಜ್‌ಕುಮಾರ್, ಎ.ವಾಸುದೇವ, ಎಂ.ವಿಕಾಸ್, ಎಂ.ಗಿರಿಜಾ, ಎಂ.ಜಿ.ಮುರಳಿ, ಕೆ.ಎಂ. ವಿನೋದ್, ಎಚ್.ಎ.ಅರುಣಾ ಅನೇಕರು ಇದ್ದರು.