

ಮಂಡ್ಯ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಕಾಂಗ್ರೆಸ್ ಸರ್ಕಾರ ವಿರೋಧ ಮಾಡುತ್ತಿದೆ. ಮಾತ್ರವಲ್ಲದೆ ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಮುಂದಾಗಿದ್ದು, ಇದನ್ನು ವಿರೋಧಿಸಿ ಸಹಿ ಅಭಿಯಾನ ಆರಂಭಿಸಿದ್ದೇವೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ದೊಡ್ಡಾಚಾರಿ ಹೇಳಿದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ಬಿಜೆಪಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ಬೆಂಬಲಿಸುವ ಸಹಿ ಅಭಿಯಾನದಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020ರಲ್ಲಿ ಜಾರಿಗೆ ತಂದಿದ್ದು, ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಹಂತದಲ್ಲಿ ಅನುಷ್ಠಾನಗೊಳಿಸಿ ಅದು ಕಾರ್ಯಗತವಾಗಿದೆ. ವಿದ್ಯಾರ್ಥಿಗಳು ಸಹ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ ಅಭ್ಯಾಸವನ್ನು ಮಾಡುತ್ತಿದ್ದಾರೆ ಎಂದರು.
ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎನ್‌ಇಪಿಯನ್ನು ವಿರೋಧಿಸುತ್ತಿದೆ. ಇದನ್ನು ಕಟುವಾಗಿ ವಿರೋಧಿಸುವುದರ ಜತೆಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬೆಂಬಲಿಸಿ ಎಬಿವಿಪಿ ರಾಜ್ಯಾದ್ಯಂತ ಸಹಿ ಸಂಗ್ರಹ ಮಾಡಲು ಕಾರ್ಯಕ್ರಮ ರೂಪಿಸಲಾಗಿದೆ. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿರುವ ಎನ್‌ಇಪಿಯನ್ನು ಜಾರಿಗೆ ತರಬೇಕು. ಅದರನ್ವಯ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಡೆದುಕೊಳ್ಳಬೇಕು. ನಮ್ಮ ಜಿಲ್ಲೆಯ ಎಲ್ಲ ತಾಲೂಕಿನಲ್ಲೂ ಸಹಿ ಸಂಗ್ರಹಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮುಖಂಡರಾದ ಪ.ನಾ.ಸುರೇಶ್, ಹರ್ಷ ಅಂಚೆದೊಡ್ಡಿ, ಶಿವಕುಮಾರ ಆರಾಧ್ಯ, ಎಬಿವಿಪಿಯ ಜಿಲ್ಲಾ ಸಂಚಾಲಕಿ ಸುಗುಣ, ವಿದ್ಯಾರ್ಥಿಗಳಾದ ನೀತಂ, ಚಂದ್ರು, ನಿಖಿತಾ, ನವ್ಯಶ್ರೀ, ಅಕ್ಷತಾ, ಅರುಣ್ ಇತರರಿದ್ದರು.