

ಮಡಿಕೇರಿ:
೬ ವರ್ಷಸೇವೆ ಪೂರೈಸಿದ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆಯನ್ನು ಖಾಯಂಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಎನ್‌ಹೆಚ್‌ಎಂ ಗುತ್ತಿಗೆ ನೌಕರರ ಸಂಘದ ವತಿಯಿಂದ ಫೆ.೧೫ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಗ್ರಾಮೀಣ ಭಾಗದಲ್ಲಿ ಇರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕಳೆದ ೭ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಬೇಡಿಕೆಗಳ ಬಗ್ಗೆ ಆರೋಗ್ಯ ಇಲಾಖೆಯ ಸಂಬಂಧಪಟ್ಟ ಕಾರ್ಯಕ್ರಮ ಅಧಿಕಾರಿಗಳು, ರಾಷ್ಟೀಯಾ ಆರೋಗ್ಯ ಅಭಿಯಾನ ನಿರ್ದೇಶಕರು ಹಾಗೂ ಆರೋಗ್ಯ ಸಚಿವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನ ಆಗಿಲ್ಲ. ಹಾಗಾಗಿ ೧೧ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಫೆ. ೧೫ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದ್ದು, ೬೧೯೨ ಸಮುದಾಯ ಆರೋಗ್ಯ ಅಧಿಕಾರಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಮುಖ ಬೇಡಿಕೆಗಳು:
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಇತರೆ ನೌಕರರಿಗೆ ನೀಡಿದ ಶೇ. ೧೫ರಷ್ಟು ವೇತನ ಹೆಚ್ಚಳವನ್ನು ಸಮುದಾಯ ಆರೋಗ್ಯ ಅಧಿಕಾರಿಗಳಿಗೂ ಅನ್ವಯಿಸಬೇಕು. ತಡೆಹಿಡಿದಿರುವ ಶೇ. ೫ ವಾರ್ಷಿಕ ವೇತನ ಮತ್ತು ಶೇ ೧೦ ಲಾಯಲಿಟಿ ಬೋನಸ್ ಕೂಡಲೇ ಬಿಡುಗಡೆ ಮಾಡಬೇಕು. ವಿನಾಕಾರಣ ವಜಾಗೊಳಿಸಿದ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಕೂಡಲೇ ವಾಪಸ್ ಕೆಲಸಕ್ಕೆ ತೆಗೆದುಕೊಳ್ಳಬೇಕು. ಸಿಪಿಹೆಚ್‌ಸಿ, ಯುಹೆಚ್‌ಸಿ ಮಾರ್ಗಸೂಚಿಗಳ ಅನ್ವಯ ಮಾಸಿಕ ಪ್ರೋತ್ಸಾಹಧನ ೧೫೦೦೦ರೂ. ಪಾವತಿಸಬೇಕು. ಸಮುದಾಯ ಆರೋಗ್ಯ ಅಧಿಕಾರಿಗಳ ಕುಟುಂಬಕ್ಕೆ ಆರೋಗ್ಯ ವಿಮೆ ಹಾಗೂ ಪಿಎಫ್ ಒದಗಿಸಬೇಕು. ಸಮುದಾಯ ಆರೋಗ್ಯ ಅಧಿಕಾರಿಗಳ ನೇಮಕಾತಿ ಷರತ್ತು ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಣೆ ಹಾಗೂ ಹೆಚ್‌ಡಬ್ಲ್ಯುಸಿ ಆಡಳಿತಕ್ಕೆ ಮಾತ್ರ ಸೀಮಿತಗೊಳಿಸಬೇಕು.
ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ ಮಾಡುವ ಅವಕಾಶ ಕಲ್ಪಿಸಬೇಕು. ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕುಡಿಯುವ ನೀರು, ಶೌಚಗೃಹ, ಸ್ವಚ್ಛತಾ ಸೇವೆ ಇತರೆ ಉಪಕರಣಗಳು ಹಾಗೂ ಔಷದವನ್ನು ಕಡ್ಡಾಯವಾಗಿ ಒದಗಿಸಬೇಕು. ನ.೧೮ರಂದು ನಡೆಸಿದ ಕಾನೂನಾತ್ಮಕ ಮುಷ್ಕರದ ಒಂದು ದಿನದ ವೇತನವನ್ನು ಪಾವತಿಸಬೇಕು. ೧೫ಎಫ್‌ಸಿ ಅಡಿಯಲ್ಲಿ ಬರುವ ೧೩ ಜಿಲ್ಲೆಯಾ ಸಮುದಾಯ ಆರೋಗ್ಯ ಅಧಿಕಾರಿಗಳ ಮೂರು ತಿಂಗಳ ವೇತನ ಪಾವತಿ ಆಗಿರುವುದಿಲ್ಲ, ಇದನ್ನು ಕೂಡಲೇ ಪಾವತಿಸಬೇಕು.