ಎನ್‌ಐಎ ಅಧಿಕಾರಿಗಳು ಮಂಗಳೂರಿಗೆ: ಶ್ರೀಲಂಕಾ ಪ್ರಜೆಗಳ ಅಕ್ರಮ ಸಾಗಾಟ ಪ್ರಕರಣ

human trafficing 27 MAY 20
Published on

ಮಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸವಿದ್ದ ಶ್ರೀಲಂಕಾದ 38 ನಿವಾಸಿಗಳ ಬಂಧನ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದರು.

ಅಕ್ರಮ ವಲಸೆ, ಅಕ್ರಮ ವಾಸ್ತವ್ಯ ಹಾಗೂ ಮಾನವ ಕಳ್ಳ ಸಾಗಾಟಕ್ಕೆ ಸಂಬಂಧಿಸಿ 38 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಪ್ರಕರಣವಾಗಿರುವ ಕಾರಣ ಕೇಂದ್ರ ಗೃಹ ಇಲಾಖೆ ನಿರ್ದೇಶನದ ಮೇರೆಗೆ ಎನ್‌ಐಎಯಿಂದ ತನಿಖೆ ಆರಂಭಗೊಂಡಿದ್ದು, ನಗರಕ್ಕೆ ಆಗಮಿಸಿದ ಡಿವೈಎಸ್ಪಿ ದರ್ಜೆಯ ಎನ್‌ಐಎ ಅಧಿಕಾರಿಗಳಿಗೆ ಸಹಕಾರ ನೀಡಲಾಗುತ್ತಿದೆ ಎಂದರು.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಮನೆಯ ಸಂಬಂಧಿಕರೇ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪೊಲೀಸ್ ಆಯುಕ್ತರು ಪ್ರತಿಕ್ರಿಯಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಧ್ವನಿಯನ್ನು ಅನುಕರಣೆ ಮಾಡಲಾಗಿದೆ ಎಂಬ ಬಗ್ಗೆ ಸ್ಥಳೀಯ ಶಾಸಕರು ಹಾಗೂ ಪಕ್ಷದ ಜಿಲ್ಲಾಧ್ಯಕ್ಷರು ಮನವಿಯೊಂದನ್ನು ತಮಗೆ ಸಲ್ಲಿಸಿದ್ದು, ಪ್ರಕರಣವನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಪ್ರಕರಣವನ್ನು ತನಿಖೆಗೆ ಒಳಪಡಿಸುವುದಾಗಿ ಸಿಎಂ ಹೇಳಿದ್ದರು. ಅದರಂತೆ ಅಲ್ಲಿಂದಲೇ ತನಿಖೆ ನಡೆಯುತ್ತಿದೆ. ಪ್ರಕರಣ ತನಿಖೆ ನಡೆಸುವಂತೆ ಇಲ್ಲಿ ಯಾರೂ ದೂರು ನೀಡಿಲ್ಲ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net