

ರಾಮನಗರ : ತಾಲೂಕಿನ ಸುಗ್ಗನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸದೆ ಹಾಗೂ ತ್ರಿವರ್ಣಧ್ವಜ ಹಾರಿಸದೆ ನಿರ್ಲಕ್ಷಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಸಂಘಟನೆಯಿಂದ ದೂರು ನೀಡಿದ್ದರೂ ಈವರೆಗೆ ಕ್ರಮ ಜರುಗಿಸಿಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಪಿ. ಪುನೀತ್ ರಾಜ್ ಕಿಡಿಕಾರಿದರು.
ರಾಮನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ವೈದ್ಯಾಧಿಕಾರಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಹಾಗೂ ಸೇವೆಯಿಂದ ವಜಾ ಮಾಡಬೇಕೆಂದು ಆಗ್ರಹಿಸಿ ದೂರು ನೀಡಿದ್ದೇವೆ. ಆದರೂ ಕ್ರಮ ಕೈಗೊಂಡಿಲ್ಲ. ಜತೆಗೆ ಯಾವುದೇ ಉತ್ತರ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಕರಣಕ್ಕೆ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮಕ್ಕಾಗಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಿಲ್ಲಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ ಎಂದು ತಿಳಿಸಿದರು.