

ಮೈಸೂರು: ಜಿಲ್ಲೆಯಲ್ಲಿ ಯಾವುದೇ ಕರೊನಾ ಪ್ರಕರಣ ದಾಖಲಾಗಿಲ್ಲ. ಆದ್ದರಿಂದ ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯ ಇಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಜೆಎನ್1 (ಒಮಿಕ್ರಾನ್ ಉಪತಳಿ) ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಅಗತ್ಯ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ. ಜತೆಗೆ, ಆರೋಗ್ಯ ಇಲಾಖೆಯಿಂದ ನೀಡಿರುವ ಸೂಚನೆ ಪಾಲನೆ ಮಾಡಲಾಗುತ್ತಿದೆ ಎಂದರು.
ಕಳೆದ ವಾರ ಸಾರ್ವಜನಿಕ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆ ಮುಖ್ಯಸ್ಥರ ಸಭೆ ನಡೆಸಲಾಗಿದೆ. 2 ಹಂತದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಶ್ವಾಸಕೋಶಕ್ಕೆ ಸಂಬಂಧಪಟ್ಟಂತೆ ಸಮಸ್ಯೆ ಇದ್ದರೆ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಗ್ರಾಮ ಮಟ್ಟದಲ್ಲಿ ಗುಂಪು ಸಭೆ ಮಾಡುವ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ರೋಗಲಕ್ಷಣ ಇದ್ದವರಿಗೆ ಚಿಕಿತ್ಸೆ ನೀಡುವ ಸಂಬಂಧ ಕ್ಲಿನಿಕಲ್ ಸರ್ವೀಸ್‌ಗೆ ಸಾರ್ವಜನಿಕ ಆಸ್ಪತ್ರೆಗಳಿಗೆ ಪ್ರತ್ಯೇಕ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಜ್ವರ, ಕೆಮ್ಮು, ಉಸಿರಾಟ ತೊಂದರೆ ಕೋವಿಡ್ ರೋಗದ ಲಕ್ಷಣಗಳಾಗಿವೆ. ಈ ಲಕ್ಷಣಗಳು ಇದ್ದವರು ಕೂಡಲೇ ಸಾರ್ವಜನಿಕ ಆಸ್ಪತ್ರೆಯನ್ನು ಸಂಪರ್ಕ ಮಾಡಬೇಕು. ಆರೋಗ್ಯ ಕಾರ್ಯಕರ್ತರನ್ನು ಭೇಟಿ ಮಾಡಿ ಸಕಾಲದಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಕೋವಿಡ್-19 ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಪಾಲನೆ, ಕೈ ತೊಳೆಯುವಿಕೆಯನ್ನು ನಿಯಮಿತವಾಗಿ ಮಾಡಿದರೆ ರೂಪಾಂತರಿ ವೈರಸ್‌ನಿಂದ ಅಪಾಯ ಇಲ್ಲ ಎಂದು ನುಡಿದರು.
ಕೇರಳದಿಂದ ಜಿಲ್ಲೆಗೆ ಬರುವ ಸಾರ್ವಜನಿಕರು, ಪ್ರವಾಸಿಗರನ್ನು ಎಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡಲಾಗುತ್ತಿದೆ. ತಾಲೂಕು ಆರೋಗ್ಯಾಧಿಕಾರಿಗಳ ಪ್ರತ್ಯೇಕ ಕಾರ್ಯಪಡೆ ರಚಿಸಲಾಗಿದೆ. ಗಡಿಗೆ ಹೊಂದಿಕೊಂಡ ಹಳ್ಳಿಗಳಲ್ಲಿ ಈ ರೀತಿಯ ಪ್ರಕರಣಗಳು ಕಂಡುಬಂದರೆ ಚಿಕಿತ್ಸೆ ಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ಕಂಡು ಬಂದಿಲ್ಲ ಎಂದು ತಿಳಿಸಿದರು.