

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಕೇಂದ್ರ ಸರ್ಕಾರ ಮಂಡಿಸಿದ 2024-25ನೇ ಸಾಲಿನ ಬಜೆಟ್ನಿಂದ ಯಾರಿಗೂ ಸಮಾಧಾನವಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸಬ್ ಕಾ ವಿಶ್ವಾಸ್ ....ಗರೀಬ್ ಕಲ್ಯಾಣ...ಇತ್ಯಾದಿ ಶಬ್ದಗಳನ್ನು ಪ್ರಯೋಗ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್. ಕೆ. ಪಾಟೀಲ ಟೀಕಿಸಿದರು.
ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ ಬಜೆಟ್ನಲ್ಲಿ ಘೊಷಣೆಗಳನ್ನು ಮಾಡಲಾಗಿದೆ. ನ್ಯಾಯಯುತವಾಗಿ ಹಂಚಿಕೆಯಾಗಬೇಕಾದ ಹಣವನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಡುವುದಿಲ್ಲ. ಇದರಿಂದ ಒಕ್ಕೂಟ ವ್ಯವಸ್ಥೆಯಲ್ಲಿ ವಿಶ್ವಾಸಾರ್ಹತೆ ಕಡಿಮೆಯಾಗುತ್ತಿದೆ ಎಂದರು.
ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಿಎಂಗೆ ಪತ್ರ ಬರೆದಿದ್ದೇನೆ. ಅಷ್ಟೇ ಅಲ್ಲ, ಮುಂಬೈ- ಕರ್ನಾಟಕ ಭಾಗದಲ್ಲೂ ಸಾಕಷ್ಟು ಸಂಖ್ಯೆಯಲ್ಲಿ ಹುದ್ದೆಗಳು ಖಾಲಿ ಇವೆ. ಸಾಕಷ್ಟು ಜನ ಉದ್ಯೋಗದ ನಿರೀಕ್ಷೆಯಲ್ಲಿ ಇದ್ದಾರೆ. ಹಾಗಾಗಿ ನೇಮಕಾತಿ ನಡೆಯಬೇಕು ಎಂದು ಪತ್ರ ಬರೆದಿದ್ದೇನೆ ಎಂದು ಹೇಳಿದರು.