ಪೌರ ಕಾರ್ಮಿಕರಿಗೆ ನೇರ ವೇತನಕ್ಕೆ ಆದೇಶ

Published on

ಹುಬ್ಬಳ್ಳಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯವನ್ನು ಹೊರಗುತ್ತಿಗೆ ಮೂಲಕ ನಿರ್ವಹಿಸುವುದನ್ನು ಸ್ಥಗಿತಗೊಳಿಸಿ ಪೌರ ಕಾರ್ಮಿಕರಿಗೆ ನೇರ ವೇತನ ನೀಡುವಂತೆ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅವರು ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಆದೇಶದ ಪ್ರಕಾರ ಪಾಲಿಕೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು 700 ಜನಸಂಖ್ಯೆಗೆ ಒಬ್ಬ ಪೌರಕಾರ್ಮಿಕರಂತೆ ನೇರವಾಗಿ ಕೆಲಸಕ್ಕೆ ತೆಗೆದುಕೊಂಡು ಅವರಿಗೆ ಪಾಲಿಕೆಯ ವತಿಯಿಂದ ಸಂಭಾವನೆಯನ್ನು ನೇರವಾಗಿ ನೀಡಲು ಸೂಚಿಸಲಾಗಿದೆ.

ನೇರ ವೇತನದಿಂದ ಹೊರಗುಳಿದಿರುವ ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇರ ವೇತನಕ್ಕೆ ಒಳಪಡಿಸುವಂತೆ ಈ ಹಿಂದೆ ಬಹಳಷ್ಟು ಹೋರಾಟಗಳು ನಡೆದಿದ್ದವು. ಬಿಜೆಪಿ, ಕಾಂಗ್ರೆಸ್ ಪಕ್ಷದ ಒತ್ತಾಯವೂ ಇತ್ತು.

2017ರ ಆಗಸ್ಟ್ 7ರಂದು ಸರ್ಕಾರದ ಆದೇಶದಲ್ಲಿ ಸ್ವಚ್ಛತಾ ಕಾರ್ಯವನ್ನು ಹೊರಗುತ್ತಿಗೆ ಮೂಲಕ ನಿರ್ವಹಿಸುವದನ್ನು ಸ್ಥಗಿತಗೊಳಿಸುವಂತೆ ತಿಳಿಸಲಾಗಿತ್ತು. 2023ರ ಅಕ್ಟೋಬರ್ 30ರಂದು ನಡೆದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ನಿರ್ಣಯವನ್ನೂ ಕೈಗೊಳ್ಳಲಾಗಿತ್ತು.

ಶಾಸಕ ಹಾಗೂ ರಾಜ್ಯ ಸ್ಲಮ್ ಬೋರ್ಡ್ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಅವರು ಮಹಾನಗರ ಪಾಲಿಕೆಗೆ ಪತ್ರ ಬರೆದು ಹೊರಗುತ್ತಿಗೆ ಪೌರ ಕಾರ್ಮಿಕರಿಗೆ ನೇರ ವೇತನ ನೀಡಲು ಕ್ರಮ ವಹಿಸಲು ಸೂಚಿಸಿದ್ದರು.

ಈ ಎಲ್ಲ ಹಿನ್ನೆಲೆಯಲ್ಲಿ ಇನ್ನು ಮುಂದೆ ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಹೊರಗುತ್ತಿಗೆ ಮೂಲಕ ನಿರ್ವಹಿಸುವುದನ್ನು ಸ್ಥಗಿತಗೊಳಿಸುವ ಬಗ್ಗೆ ವಲಯ ಸಹಾಯಕ ಆಯುಕ್ತರು ತಮ್ಮ ಹಂತದಲ್ಲಿಯೇ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಸ್ವಚ್ಛತಾ ಗುತ್ತಿಗೆದಾರರಿಗೆ ನೀಡಲಾಗಿದ್ದ ಕಾರ್ಯಾದೇಶವನ್ನು ರದ್ದುಗೊಳಿಸಬೇಕು. ಇದನ್ನು 30.09.2025 ರಿಂದ ಜಾರಿಗೆ ಬರುವಂತೆ ಕ್ರಮ ವಹಿಸಬೇಕಂದು  ಆಯುಕ್ತರು ತುರ್ತು ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net