ನಕ್ಸಲ್ ಬಾಧಿತ ಪ್ರದೇಶಗಳಿಗೆ ಸೌಕರ್ಯಕ್ಕೆ ಸೂಚನೆ

5 ckm 5
ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ನಕ್ಸಲ್ ಚಟುವಟಿಕೆಗಳನ್ನು ತೊರೆದು ಮುಖ್ಯವಾಹಿನಿಗೆ ಮರಳಿರುವ ಕುಟುಂಬಗಳ ಅಭಿವೃದ್ಧಿ, ಸ್ಥಿತಿಗತಿಗಳು, ಅವರಿಗೆ ನೀಡಬೇಕಾದ ಸರ್ಕಾರಿ ಸೌಲಭ್ಯಗಳು ಹಾಗೂ ಅವರ ಬೇಡಿಕೆಗಳು ಮತ್ತು ಮೂಲಭೂತ ಸೌಕರ್ಯ ಒದಗಿಸುವ ಕುರಿತು ಸಭೆ ನಡೆಯಿತು. ಜಿತೇಂದರ್ ಕುಮಾರ್ ದಹಿಮ, ಎಚ್.ಎಸ್.ಕೀರ್ತನಾ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ನಕ್ಸಲ್ ಬಾಧಿತ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಅವರ ಬೇಡಿಕೆಗಳನ್ನು ಪೂರೈಸಲು ಅಗತ್ಯ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ನಕ್ಸಲ್ ಚಟುವಟಿಕೆಗಳನ್ನು ತೊರೆದು ಮುಖ್ಯವಾಹಿನಿಗೆ ಮರಳಿರುವ ಕುಟುಂಬಗಳ ಅಭಿವೃದ್ಧಿ, ಸ್ಥಿತಿಗತಿಗಳು, ಅವರಿಗೆ ನೀಡಬೇಕಾದ ಸರ್ಕಾರಿ ಸೌಲಭ್ಯಗಳು ಹಾಗೂ ಅವರ ಬೇಡಿಕೆಗಳು ಮತ್ತು ಮೂಲಭೂತ ಸೌಕರ್ಯ ಒದಗಿಸುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯ ಶೃಂಗೇರಿ, ಕೊಪ್ಪ, ಕಳಸ, ಎನ್.ಆರ್.ಪುರ ಹಾಗೂ ಮೂಡಿಗೆರೆ ತಾಲೂಕುಗಳು ನಕ್ಸಲ್ ಪೀಡಿತ ಗ್ರಾಮಗಳನ್ನು, ಪ್ರದೇಶಗಳನ್ನು ಹೊಂದಿರುವ ತಾಲೂಕುಗಳಾಗಿವೆ. ಈ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗೆ ವಿದ್ಯುತ್, ಕುಡಿಯುವ ನೀರು, ರಸ್ತೆ, ವಸತಿ ಸೇರಿದಂತೆ ಅವರ ಬೇಡಿಕೆಯ ಮೂಲಭೂತ ಸೌಕರ್ಯಗಳನ್ನು ಶೀಘ್ರವಾಗಿ ಕಲ್ಪಿಸಿಕೊಡಬೇಕು ಎಂದರು.
ನಕ್ಸಲ್ ಬಾದಿತ ಪ್ರದೇಶಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ರಸ್ತೆಗಳು ಗಿಡಗಂಟಿಗಳಿAದ ಮುಚ್ಚಿದ್ದಲ್ಲಿ ಅವುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಆ ಪ್ರದೇಶದಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಕೊರತೆಯಾಗದಂತೆ ಕ್ರಮ ವಹಿಸಿ, ಆರೋಗ್ಯ ತಪಾಸಣೆ ಮಾಡಿ ಉಚಿತ ಔಷಧಗಳನ್ನು ನೀಡಬೇಕು. ಕುಡಿಯುವ ನೀರಿನ ಮೂಲಗಳನ್ನು ಗುರುತಿಸಿ ಪ್ರತಿ ಮನೆಗೂ ನೀರಿನ ಸಂಪರ್ಕ ಕಲ್ಪಿಸಿಕೊಡಲು ಕ್ರಮ ವಹಿಸಬೇಕು ಎಂದು ತಾಕೀತು ಮಾಡಿದರು.
ಮಕ್ಕಳನ್ನು ಶಾಲೆಗೆ ಕರೆತಂದು ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಮಕ್ಕಳು ಹಾಗೂ ಗರ್ಭಿಣಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ ನೀಡಬೇಕು. ವಿದ್ಯುತ್ ಕಂಬಗಳು ಬಿದ್ದು ಹೋದಲ್ಲಿ ಕೂಡಲೇ ಕಂಬಗಳನ್ನು ಪುನರ್ ಸ್ಥಾಪಿಸಿ ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಪ್ರತಿ ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಕಲ್ಪಿಸಬೇಕು. ಟ್ರಾನ್ಸ್ ಫಾರ್ಮ್ ಕೊರತೆ ಇದ್ದಲ್ಲಿ ತುರ್ತಾಗಿ ಕ್ರಿಯಾ ಯೋಜನೆ ಸಲ್ಲಿಸಬೇಕು. ಬಿಎಸ್‌ಎನ್‌ಎಲ್ ನೆಟ್ ವರ್ಕ್ ಸಿಗುವಂತೆ ಕ್ರಮವಹಿಸಬೇಕು ಎಂದು ಹೇಳಿದರು.
ಸಂಬAಧಪಟ್ಟ ಅಧಿಕಾರಿಗಳು ನಕ್ಸಲ್ ಬಾಧಿತ ಪ್ರದೇಶಗಳಿಗೆ ಖುದ್ದಾಗಿ ತೆರಳಿ ಸ್ಥಳ ಪರಿಶೀಲನೆ ನಡೆಸಿ ಅಲ್ಲಿನ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಬೇಕು. ಈ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬುವುದರ ಜೊತೆಗೆ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು ಎಂದರು.
ಸಭೆಯಲ್ಲಿ ಜಿಪಂ ಸಿಇಒ ಎಚ್.ಎಸ್. ಕೀರ್ತನಾ, ಎಸ್‌ಪಿ ಜಿತೇಂದರ್ ಕುಮಾರ್ ದಹಿಮ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net