ಮಾದಕ ವಸ್ತು ವಿರುದ್ಧ ಜಾಗೃತಿ ಕಾರ್ಯಕ್ರಮ

nss
Published on

ಕುಶಾಲನಗರ:

ಮಾದಕ ವಸ್ತುಗಳು ಯುವಜನರಿಗೆ ಮಾರಕವಾಗಿ ಪರಿಣಮಿಸಿದ್ದು, ದುಶ್ಚಟದಿಂದ ದೂರವಾದರೆ ಮಾತ್ರ ಸದೃಢ ಸಮಾಜ ನಿರ್ಮಿಸಲು ಸಾಧ್ಯ ಎಂದು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ಎನ್. ಕುಮಾರಿ ಹೇಳಿದರು. ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ವತಿಯಿಂದ ಕುಶಾಲನಗರ ತಾಲೂಕು ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿರುವ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಬುಧವಾರ ಉಪನ್ಯಾಸ ನೀಡಿದರು.

ಮಾದಕವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳು, ಈ ಬಗ್ಗೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಸಮಾಜದ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿರುತ್ತದೆ. ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಪಣ ತೊಡಬೇಕು. ಪ್ರತಿಯೊಬ್ಬರೂ ಕಾನೂನು ಪರಿಪಾಲಿಸುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು. ಸಾಮಾಜಿಕ ಮಾಧ್ಯಮ ಹಾಗೂ ಜಾಲತಾಣಗಳ ಬಳಕೆ ಬಗ್ಗೆ ಎಚ್ಚರಿಕೆ ವಹಿಸುವುದು ಬಹಳ ಅಗತ್ಯ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿ ಡಾ ಎಸ್. ಸುನಿಲ್ ಕುಮಾರ್, ಯುವಶಕ್ತಿ ಈ ದೇಶದ ಬಹು ದೊಡ್ಡ ಆಸ್ತಿ. ಆ ಅಸ್ತಿಯನ್ನು ಜೋಪಾನದಿಂದ ಕಾಪಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಯುವಕರು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಒಳ್ಳೆಯ ಜೀವನ ರೂಪಿಸಿಕೊಳ್ಳಬೇಕು ಎಂದರು

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ಎನ್ನೆಸ್ಸೆಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ತಮ್ಮನ್ನು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತಮ ವೇದಿಕೆ ಒದಗಿಸುತ್ತವೆ ಎಂದರು.

ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿ ಡಾ. ಬಿ.ಕೆ. ಕುಮಾರ್ ಎನ್ನೆಸ್ಸೆಸ್ ಧ್ಯೇಯೋದ್ದೇಶಗಳನ್ನು ತಿಳಿಸಿದರು. ಪೊಲೀಸ್ ಸಿಬ್ಬಂದಿ ಹರ್ಷಿತಾ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸ್ವಾವಲಂಬಿ ಜೀವನ ನಡೆಸುವಂತಾಗಬೇಕು ಎಂದರು. ಕಾಲೇಜಿನ ಉಪನ್ಯಾಸಕರಾದ ಡಾ. ಟಿ.ಎಂ. ಸುಧಾಕರ್,

ಡಾ. ಎನ್. ಸಿದ್ಧಪ್ಪಾಜಿ, ನಟರಾಜು, ಮನೋಜ್ ಕುಮಾರ್, ಎಸ್.ಆರ್.ಚರಣರಾಜ್, ಪೊಲಿಸ್ ಸಿಬ್ಬಂದಿ ಬಿ.ಒ.ಸುನಿಲ್, ಶಿಲ್ಪ, ಎನ್ನೆಸ್ಸೆಸ್ ಶಿಬಿರಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net