ಯುವಜನರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು

udp-9-nss
Published on

ಉಡುಪಿ: ವಿದ್ಯಾರ್ಥಿಗಳು ಎನ್​.ಎಸ್​.ಎಸ್​ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಜೊತೆಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್​ ಬಿ. ಕರೆ ನೀಡಿದರು.

ಬುಧವಾರ ಮಲ್ಪೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶಾಲಾ ಶಿಕ್ಷಣ ಇಲಾಖೆ , ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ವತಿಯಿಂದ ನಡೆದ ಎನ್​ ಎಸ್​ ಎಸ್​ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸುವ ಜೊತೆಗೆ ಸಮುದಾಯದ ಸಮಸ್ಯೆಗಳನ್ನು ಅರಿತು ಸಹಾಯ ಮಾಡಬೇಕು. ಇದರಿಂದ ಕೌಶಲ್ಯ ಹಾಗೂ ಜ್ಞಾನ ಬೆಳೆಯುತ್ತದೆ. ಯುವಜನರು ಸ್ವಯಂ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂಬುದು ಮಹಾತ್ಮಾ ಗಾಂಧೀಜಿಯವರ ಆಶಯವಾಗಿತ್ತು. ಇದರಿಂದ ವಿದ್ಯಾರ್ಥಿಗಳ ಜೀವನದಲ್ಲಿ ನಾಯಕತ್ವ, ಶಿಸ್ತಿನ ಜತೆಗೆ ಸಾರ್ವತ್ರಿಕ ಪ್ರಜ್ಞೆಯನ್ನು ಬೆಳೆಸಲು ಸಹಕಾರಿ ಎಂದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್​ ಕುಮಾರ್​ ಮಾತನಾಡಿ, ಶಿಬಿರಗಳ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡ ವಿದ್ಯಾರ್ಥಿಗಳು ಸಮಾಜ ಸೇವಕರಾಗಿ ಪರಿವರ್ತನೆಗೊಂಡು ಸಮಾಜದ ಏಳಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಎಂದರು.

ಮಲ್ಪೆ ಸರ್ಕಾರಿ ಪದವಿಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಮುಖ್ಯೋಪಾಧ್ಯಾಯಿನಿ ಸಂಧ್ಯಾ ಮಾತನಾಡಿದರು. ಕಾಲೇಜಿನ ಶಿಕ್ಷಣ ಸೇವಾ ಸಮಿತಿಯ ಖಜಾಂಜಿ ಶೇಖರ್​ ಕೋಟ್ಯಾನ್​, ಮಲ್ಪೆಯ ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯ ಸದಾನಂದ ಸಾಲ್ಯಾನ್​, ಖಜಾಂಜಿ ಚಂದ್ರಶೇಖರ್​, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಯಾನಂದ, ಶಿಕ್ಷಣ ತಜ್ಞ ವಿಶ್ವನಾಥ ಬಾಯರಿ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವರ್ಗೀಸ್​ ಪಿ., ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ) ವಿಭಾಗದ ಮುಖ್ಯೋಪಾಧ್ಯಾಯಿನಿ ಇಂದಿರಾ ಮತ್ತಿತರರು ಉಪಸ್ಥಿತರಿದ್ದರು. ಉಪನ್ಯಾಸಕಿ ಶುಭಗೀತಾ ಸ್ವಾಗತಿಸಿ, ಪ್ರಕಾಶ್​ ಶೆಟ್ಟಿ ನಿರೂಪಿಸಿದರು. ಉಪನ್ಯಾಸಕಿ ಭವ್ಯಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net