

ಶಿವಮೊಗ್ಗ: ಎನ್‌ಎಸ್‌ಯುಐ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರ ಜತೆ ಜತೆಗೆ ಪಕ್ಷವನ್ನೂ ಕಟ್ಟುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ಅಂಬೇಡ್ಕರ್ ಭವನದಲ್ಲಿ ಶನಿವಾರ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐನಿಂದ ಪ್ರತಿಭಾ ಪುರಸ್ಕಾರ ಹಾಗೂ ನೋಟ್‌ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಕಾಂಗ್ರೆಸ್ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುವ, ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಸಾರ್ಥಕ ಕೆಲಸ ಮಾಡುತ್ತಿದೆ ಎಂದರು.
ಎನ್‌ಎಸ್‌ಯುಐ ಇಂದು ದೇಶ ಕಟ್ಟುವ ಕೆಲಸ ಮಾಡುತ್ತಿದೆ. ಅದಕ್ಕಾಗಿ ಜುಡೇಗಾ ವಿದ್ಯಾರ್ಥಿ ಜೀನೇಗಾ ಇಂಡಿಯಾ ಎಂಬ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ದೇಶದ ಐಕ್ಯತೆಗಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡಿದ ಏಕೈಕ ವ್ಯಕ್ತಿಯಾಗಿದ್ದಾರೆ. ಜನರಿಂದ ಆಯ್ಕೆಯಾಗಿದ್ದ ಲೋಕಸಭಾ ಸದಸ್ಯತ್ವವನ್ನು ವಜಾಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ರಾಹುಲ್ ಗಾಂಧಿ ಅವರ ಪರ ನಿಲುವು ಪ್ರಕಟಿಸಿದೆ. ಇದು ಪ್ರಜಾಪ್ರಭುತ್ವಕ್ಕೆ ಒಂದು ದೊಡ್ಡ ಗೆಲುವಾಗಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮಾತನಾಡಿ, ಎನ್‌ಎಸ್‌ಯುಐ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸುವ ಕೆಸಲವನ್ನು ಮಾಡುತ್ತಿದೆ. ಶಿವಮೊಗ್ಗ ಜಿಲ್ಲಾ ಘಟಕ ಈ ನಿಟ್ಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದೆ ಎಂದರು.
ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಮಾತನಾಡಿ, ಅನ್ಯಾಯ ಆಗುವುದನ್ನು ಪ್ರತಿಭಟಿಸುವುದೇ ನ್ಯಾಯ. ಈ ಕೆಲಸವನ್ನು ಎನ್‌ಎಸ್‌ಯುಐ ಮಾಡುತ್ತಿದೆ ಎಂದು ಹೇಳಿದರು.
ಕೆಪಿಸಿಸಿ ವಕ್ತಾರ ನಿಖೇತ್‌ರಾಜ್ ಮೌರ್ಯ ವಿಶೇಷ ಉಪನ್ಯಾಸ ನೀಡಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ ಮಾಡಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಎಂಎಲ್‌ಸಿ ಆರ್.ಪ್ರಸನ್ನಕುಮಾರ್, ಯುವ ಮುಖಂಡ ಗಣೇಶ್ ಸಂಗಮೇಶ್, ಮುಖಂಡರಾದ ಎಸ್.ಪಿ.ದಿನೇಶ್, ಎನ್.ರಮೇಶ್, ಕಲೀಂ ಪಾಶ, ಜಿ.ಪಲ್ಲವಿ, ಯಮುನಾ ರಂಗೇಗೌಡ, ಸಿ.ಜಿ.ಮಧುಸೂದನ್, ಶ್ರೀಜಿತ್, ಕೆ.ಚೇತನ್, ರಮೇಶ್ ಶಂಕರಘಟ್ಟ, ವಿಜಯಕುಮಾರ್ ಸಂತೇಕಡೂರು, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ ಕುಮಾರ್, ಹರ್ಷಿತ್, ಶರಣ್ ಇತರರಿದ್ದರು.
ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಭಾಗ್ಯ!
ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಏರ್ಪಡಿಸಿದೆ. ಕೆಲವು ಕಡೆ ಬಸ್‌ಗಳ ಕೊರತೆ ಇದೆ. ಅದನ್ನು ನೀಗಿಸುವ ಪ್ರಯತ್ನ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಲಿಂಗ ಭೇದವಿಲ್ಲದೆ ಉಚಿತ ಬಸ್ ಸೌಲಭ್ಯ ಒದಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.