

ಉಡುಪಿ: ಶರಣರು 12 ನೇ ಶತಮಾನದಲ್ಲಿ ಬಸವಣ್ಣನವರ ವ್ಯಕ್ತಿತ್ವ ಹಾಗೂ ವಚನಗಳಿಂದ ಪ್ರಭಾವಿತರಾಗಿ ಕಾಯಕ ನಿಷ್ಠೆಯಿಂದ ವಚನಗಳನ್ನು ರಚಿಸಿ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. ಇಂತಹ ಶರಣರ ಜೀವನ ಶೈಲಿಯನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ನಡೆದ ಶ್ರೀ ನುಲಿಯ ಚಂದಯ್ಯ ಜಯಂತಿ ಉದ್ಘಾಟಿಸಿ, ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಕಾಯಕವೇ ಕೈಲಾಸ ಎಂಬ ಬಸವಣ್ಣನವರ ತತ್ವವನ್ನು ಪಾಲಿಸಿದವರಲ್ಲಿ ನುಲಿಯ ಚಂದಯ್ಯ ಕೂಡ ಒಬ್ಬರು. ಅರಣ್ಯದಲ್ಲಿ ಬೆಳೆದ ಹುಲ್ಲಿನಿಂದ ಹಗ್ಗವನ್ನು ಹೊಸೆದು ಮಾರಿ ಬಂದ ಹಣದಿಂದ ಜೀವನ ನಡೆಸುವುದರೊಂದಿಗೆ ಸಾಮಾಜಿಕ ಕಾರ್ಯಗಳಿಗೂ ವ್ಯಯಿಸುತ್ತಿದ್ದರು. ಅವರ ವಚನಗಳಲ್ಲಿ ಕಾಯಕ ಮತ್ತು ದಾಸೋಹಕ್ಕೆ ಹೆಚ್ಚಿನ ಒತ್ತು ನೀಡಿದ್ದರು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉಪನ್ಯಾಸ ನೀಡಿ ಮಾತನಾಡಿ, ಕಲ್ಯಾಣ ಕ್ರಾಂತಿ ಸಂದರ್ಭದಲ್ಲಿ ಶರಣರ ವಚನಗಳನ್ನು ರಕ್ಷಿಸುವುದರೊಂದಿಗೆ ಸಮಾಜದ ಅಭ್ಯುಧ್ಯಕ್ಕೆ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ಶರಣರ ತತ್ವ-ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ವ್ಯಕ್ತಿತ್ವವನ್ನು ಬೆಳೆಸುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನಿ, ಕನ್ನಡ ಸಾಹಿತ್ಯ ಪರಿಷತ್ತು ಮಾಧ್ಯಮ ಕಾರ್ಯದರ್ಶಿ ನರಸಿಂಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿದರು. ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಮತ್ತು ದ. ಕನ್ನಡದ ಜಿಲ್ಲಾ ಅಧ್ಯಕ್ಷ ಸಿದ್ದಬಸಯ್ಯ ಸ್ಯಾಮಿ ಚಿಕ್ಕಮಠ ವಂದಿಸಿದರು.